ಬೆಂಗಳೂರು; ಒಕ್ಕಲಿಗ ಯುವ ಬ್ರೀಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು ನಡೆಯಿತು.
ನಗರದ ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿರುವ ಪ್ರತಿಷ್ಠಿತ ಬಿಲ್ವ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್‌ನಲ್ಲಿ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರವನ್ನು ಹಿರಿಯ ಪತ್ರಕರ್ತರು ಹಾಗೂ ಪ್ರಜಾವಾಣಿ ಮುಖ್ಯ ಸಂಪಾದಕರಾದ ರವೀಂದ್ರ ಭಟ್ ಉದ್ಘಾಟಿಸಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಬೆಂಗಳೂರು ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿಯವರು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು.
ರಾಜ್ಯ ಸರ್ಕಾರದ ಮುಖ್ಯ ಇಂಜಿನಿಯರ್ ರಾದ ಬಿ. ಕೆ ಪವಿತ್ರ, ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಡಾ. ಟಿ.ಆರ್. ಚಂದ್ರಶೇಖರ್ , ನಿವೃತ್ತ ಪ್ರಾಂಶುಪಾಲರು ಹಾಗೂ ಮಾಜಿ ಸಿಂಡಿಕೇಟ್ ಸದಸ್ಯರಾದ ನಂಜುಂಡಯ್ಯ, ಬಿಲ್ವ ಮಲ್ಟ ಸ್ಪೆಷಾಲಿಟಿ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೇಶವಮೂರ್ತಿ, ಖ್ಯಾತ ಸ್ತ್ರೀರೋಗ ತಜ್ಞರಾದ ಡಾ. ಗೋಪಿನಾಥ್ ಮತ್ತಿತರ ಗಣ್ಯರು ಭಾಗವಹಿಸಿದ್ದರು.

ಈ ವೇಳೆ ಒಕ್ಕಲಿಗರ ಯುವ ಬ್ರಿಗೇಡ್ ಹಾಗೂ ಎನ್‌ಆರ್‌ಐ ಒಕ್ಕಲಿಗರ ಬ್ರಿಗೇಡ್‌ನ ಸಂಸ್ಥಾಪಕ ಅಧ್ಯಕ್ಷರಾದ ನಂಜೇಗೌಡ ನಂಜುಂಡ ಅವರು ಮಾತಾನಡಿ, ಕಳೆದ ವರ್ಷ ತಮ್ಮ ಸಂಸ್ಥೆ ಮೂಲಕ ಸುಮಾರು 3 ಸಾವಿರ ಯುವಜನರಿಗೆ ಉಚಿತ ಉದ್ಯೋಗಾವಕಾಶ ಕಲ್ಪಿಸಿದ್ದು, 150 ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ದಾರಿ ಮಾಡಿಕೊಡಲಾಗಿದೆ. ಬೆಂಗಳೂರು, ಮೈಸೂರಿನಲ್ಲಿ ಉಚಿತ ಆರೋಗ್ಯ ಮೇಳವನ್ನು ಹಮ್ಮಿಕೊಂಡು ಗ್ರಾಮೀಣ ಜನರಿಗೆ ಸೇವೆ ಒದಗಿಸಲು ಸಹಕಾರ ನೀಡಿದ್ದೇವೆ ಎಂದರು. ಜೊತೆಗೆ ಈ ವರ್ಷ 4 ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಗುರಿ ಹೊಂದಲಾಗಿದೆ. ಈಗಾಗಲೇ ತುಮಕೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಿ 750 ಯುವಕರಿಗೆ ಉದ್ಯೋಗ ದೊರಕಿಸಲಾಗಿದೆ. ಮುಂದಿನ ಉದ್ಯೋಗ ಮೇಳವನ್ನು ಮೈಸೂರಿನ ಪಿರಿಯಾಪಟ್ಟಣದಲ್ಲಿ ಜುಲೈ ತಿಂಗಳಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಈ ವರ್ಷವೂಸುಮಾರು 200 ಬಡ ಪ್ರತಿಭಾವಂತ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಪತ್ರಕರ್ತರಾದ ರವೀಂದ್ರ ಭಟ್ ಅವರು ಮಾತನಾಡಿ, ಹಿಂದೆಲ್ಲ ಆಹಾರ ಮತ್ತು ಔಷಧ ಬೇರೆ ಬೇರೆ ಆಗಿರಲಿಲ್ಲ. ಈಗ ನಾವೆಲ್ಲರೂ ಸೇವಿಸುವ ಆಹಾರ ವಿಷಯುಕ್ತವಾಗಿದೆ. ಹಾಗಾಗಿ, ದೈನಂದಿನ ಆಹಾರ ಬಗ್ಗೆ ಎಚ್ಚರ ವಹಿಸುವ ಕಾಲವಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಅವರು ಸಲಹೆ ನೀಡಿದ್ದಾರೆ.
ಜೊತೆಗೆ ನಂಜೇಗೌಡ ಅವರ ಸಾಮಾಜಿಕ ಕಳಕಳಿಯನ್ನು ಶ್ಲಾಘಿಸಿ ಸಾಮಾನ್ಯ ಜನರಿಗೆ ಉಚಿತ ಆರೋಗ್ಯ ಸೇವೆ ಮತ್ತು ಉದ್ಯೋಗ ಕಲ್ಪಿಸುತ್ತಿರುವುದು ಅತ್ಯುತ್ತಮವಾದುದು. ಮುಖ್ಯವಾಗಿ ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ವಿಶೇಷಚೇತನರು, ದಿವ್ಯಾಂಗರಿಗೆ ಉದ್ಯೋಗ ಕಲ್ಪಿಸುವ ಬಗ್ಗೆ ಗಮನಹರಿಸಿದರೆ ತಾವು ಕೂಡ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದರು.

ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನದ ಬೆಂಗಳೂರು ವಿಜಯನಗರ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿ, ಇತ್ತೀಚಿನ ದಿನಗಳಲ್ಲಿ ಮನುಷ್ಯನಿಗೆ ಆರೋಗ್ಯ ಮುಖ್ಯ. ಹಿಂದೆಲ ಆರೋಗ್ಯ ಚೆನ್ನಾಗಿತ್ತು ಆರೋಗ್ಯವೂ ಉತ್ತಮವಾಗಿರುತ್ತಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಉತ್ತಮ ಆಹಾರ ಪದ್ಧತಿ ಅಳವಡಿಸಿಕೊಳ್ಳುವುದರ ಜತೆಗೆ ದಿನನಿತ್ಯ ಒಂದಿಲ್ಲೊಂದು ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಬೃಹತ್ ಆರೋಗ್ಯ ಮೇಳ
ಬಿಲ್ವ ಮಲ್ಟ ಸ್ಪೆಷಾಲಿಟಿ ಹಾಸ್ಪಿಟಲ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಕೇಶವಮೂರ್ತಿ ಮಾತನಾಡಿ, ಮುಂದಿನ ದಿನಗಳಲ್ಲಿ ಬಡವರು ಮತ್ತು ಮಧ್ಯಮ ವರ್ಗದ ಜನರಿಗೂ ಗುಣಮಟ್ಟ ಆರೋಗ್ಯ ಸೇವೆ ಕಲ್ಪಿಸಲಾಗುವುದು. ದೊಡ್ಡ ಮಟ್ಟದಲ್ಲಿ ಉಚಿತ ಆರೋಗ್ಯ ಮೇಳವನ್ನು ನಡೆಸುವ ಮೂಲಕ ವೈದ್ಯಕೀಯ ಸೇವೆ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

