ಭುವನೇಶ್ವರ: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಘಾತ ಆರೈಕೆ ಐಸಿಯು ವಿಭಾಗದಲ್ಲಿ ಸೋಮವಾರ ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿ 10 ರೋಗಿಗಳು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಮಧ್ಯರಾತ್ರಿ ಸುಮಾರು 2:30 ಗಂಟೆ ಸುಮಾರಿಗೆ ಐಸಿಯು ವಿಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ರೋಗಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ಆರಂಭಿಸಿದರು.
ರೋಗಿಗಳನ್ನು ರಕ್ಷಿಸುವ ವೇಳೆ ಕನಿಷ್ಠ 11 ಆಸ್ಪತ್ರೆ ಸಿಬ್ಬಂದಿಗೆ ಸುಟ್ಟ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಗೆ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
ಘಟನೆಯ ನಂತರ ಒಟ್ಟು 23 ರೋಗಿಗಳನ್ನು ಇತರ ವಾರ್ಡ್‌ಗಳು ಹಾಗೂ ಐಸಿಯುಗಳಿಗೆ ಸ್ಥಳಾಂತರಿಸಲಾಗಿದೆ. ಆದರೆ ಸ್ಥಳಾಂತರಿಸುವ ವೇಳೆ ಗಂಭೀರ ಸ್ಥಿತಿಯಲ್ಲಿದ್ದ ಏಳು ರೋಗಿಗಳು ಸಾವನ್ನಪ್ಪಿದ್ದು, ನಂತರ ಚಿಕಿತ್ಸೆ ವೇಳೆ ಇನ್ನೂ ಮೂವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಆರೋಗ್ಯ ಸಚಿವ ಮುಖೇಶ್ ಮಹಾಲಿಂಗ್ ಅವರೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಅಲ್ಲದೆ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ರೋಗಿಗಳನ್ನು ಭೇಟಿ ಮಾಡಿ ವೈದ್ಯರಿಂದ ಮಾಹಿತಿ ಪಡೆದರು.
ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿರುವ ಮುಖ್ಯಮಂತ್ರಿ ಮಾಝಿ, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಘಟನೆಯ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

