ಲಕ್ನೋ : ಉತ್ತರಪ್ರದೇಶದ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನವಾಗಿದ್ದು, 17 ಮಕ್ಕಳ ಸ್ಥಿತಿ ಗಂಭೀರವಾಗಿರವ ಹೃದಯವಿದ್ರಾವಕ ಘಟನೆ ತಡರಾತ್ರಿ ನಡೆದಿದೆ.
ರಾತ್ರಿ 10:35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 10 ಮಕ್ಕಳು ಸಾವನ್ನಪ್ಪಿದ್ದಾರೆ. 37 ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಕ್ಕಳ ವಾರ್ಡ್‌ನ ಎರಡು ಘಟಕಗಳ ಪೈಕಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವಾರ್ಡ್‌ನಲ್ಲಿದ್ದ ಸಿಬ್ಬಂದಿ ತಿಳಿಸಿದ್ದಾರೆ.
ಝಾನ್ಸಿಯ ಮಹಾರಾಣಿ ಲಕ್ಷೀಬಾಯಿ ವೈದ್ಯಕೀಯ ಕಾಲೇಜಿನ ನವಜಾತ ಶಿಶುಗಳ ತೀವ್ರ ನಿಗಾಘಟಕದಲ್ಲಿ (ಎನ್‌ಐಸಿಯು) ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿತ್ತು. ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳಕ್ಕೆ ತಲುಪುವ ಮೊದಲೇ ಹೊಗೆ ತುಂಬಿದ ವಾರ್ಡ್‌ನ ಕಿಟಕಿಗಳನ್ನು ಒಡೆದು ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಹಲವು ರೋಗಿಗಳನ್ನು ಸ್ಥಳಾಂತರಿಸಿದ್ದಾರೆ.
ಎನ್‌ಐಸಿಯುನಲ್ಲಿ ಒಟ್ಟು 54 ಮಕ್ಕಳನ್ನು ದಾಖಲಿಸಲಾಗಿದ್ದು, 44 ಮಕ್ಕಳನ್ನು ರಕ್ಷಿಸಲಾಗಿದೆ. ಬಲಿಯಾದ ಶಿಶುಗಳ ಪೈಕಿ ಏಳು ಮಕ್ಕಳನ್ನು ಗುರುತಿಸಲಾಗಿದೆ ಎಂದು ಉತ್ತರಪ್ರದೇಶದ ಉಪಮುಖ್ಯಮಂತ್ರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ.
ಮಾಹಿತಿ ಪಡೆದ ಸಿಎಂ ಯೋಗಿ :
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿಕ್ರಿಯಿಸಿ, ಘಟನೆ ಬಗ್ಗೆ ಮಾಹಿತಿ ಪಡೆದು ಉಪ ಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಮತ್ತು ಪ್ರಧಾನ ಕಾರ್ಯದರ್ಶಿಯನ್ನು ಝಾನ್ಸಿಗೆ ಕಳುಹಿಸಲಾಗಿದೆ. ಇದರೊಂದಿಗೆ ಝಾನ್ಸಿ ಕಮಿಷನರ್ ಮತ್ತು ಡಿಐಜಿಗೆ ಅಪಘಾತದ ತನಿಖೆಗೆ ಆದೇಶಿಸಲಾಗಿದೆ. ಎಲ್ಲ ಮಕ್ಕಳು ಕೂಡಲೇ ಗುಣಮುಖರಾಗಲಿ ಎಂದು ದೇವರ ಬಳಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮತ್ತು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಅಪಘಾತದ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.
ತಲಾ 5 ಲಕ್ಷ ರೂ ಪರಿಹಾರ:
ಮೃತ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ., ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ನೀಡುವುದಾಗಿ ಸರ್ಕಾರ ಘೋಷಿಸಿದೆ.

