ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.
ಪತಿ ಅನೂಪ್ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಘಟನಾ ಸ್ಥಳಕ್ಕೆ ಸದಾಶಿವನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಮಕ್ಕಳಿಬ್ಬರಿಗೂ ವಿಷಪ್ರಾಶನ ಮಾಡಿದ ಬಳಿಕ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಅಲಹಾಬಾದ್ ಮೂಲದ ಅನೂಪ್, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ವಾಸವಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಕನ್ಸಲ್ಟೆಂಟ್ ಆಗಿ ಅನೂಪ್ ಕೆಲಸ ಮಾಡುತ್ತಿದ್ದರು. ಆರ್ಥಿಕ ನಷ್ಟದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ನಿರ್ಧರಿಸಿರಬಹುದು ಎಂದು ಶಂಕಿಸಲಾಗಿದೆ.

