ಬೆಂಗಳೂರು: ಎಚ್‌ಎಂಟಿ ಲಿಮಿಟೆಡ್‌ನ ಸ್ವಾಧಿನದಲ್ಲಿರುವ 14300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿಯನ್ನು ರಾಜ್ಯ ಸರ್ಕಾರಕ್ಕೆ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಇಂದಿಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಚಿವ ಸಂಪುಟ ಸಭೆಯ ನಿರ್ಣಯದ ಕುರಿತು ವಿವರಿಸಿದ ಅವರು, ಎಚ್‌ಎಂಟಿ ಕಾರ್ಖಾನೆಯು ಬೆಂಗಳೂರಿನಲ್ಲಿ ಹೊಂದಿರುವ ಪ್ರದೇಶಗಳನ್ನು ಕೇಂದ್ರ ಸರ್ಕಾರದ ಇತರೆ ಸಂಸ್ಥೆಗಳಿಗೆ ಹಸ್ತಾಂತರಿಸಲು ನಿರಾಕ್ಷೇಪಣಾ ಪತ್ರ ನೀಡುವ ಕುರಿತು ಅಧಿಕಾರಿಗಳು ತಮ್ಮದೇ ಆದ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.
ಸಚಿವ ಸಂಪುಟದ ಪೂರ್ವಾನುಮತಿ ಅಥವಾ ಉನ್ನತ ಮಟ್ಟದ ಸಮಿತಿಯ ಅನುಮೋದನೆಯನ್ನು ಪಡೆಯದೇ ಸುಪ್ರಿಂ ಕೋರ್ಟ್ಗೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಹಿಂಪಡೆಯಲು ಸಲ್ಲಿಸಲಾಗಿರುವ ರಾಜ್ಯ ಸರ್ಕಾರದ ಅರ್ಜಿ ಸಲ್ಲಿಕೆಗೆ ಅರಣ್ಯ ಸಚಿವರು ತೆಗೆದುಕೊಂಡಿರುವ ನಿರ್ಣಯಕ್ಕೆ ರಾಜ್ಯ ಸಚಿವ ಸಂಪುಟ ಘಟನೋತ್ತರ ಮಂಜೂರಾತಿ ನೀಡಿದೆ ಎಂದು ಅವರು ತಿಳಿಸಿದರು.
2015ರಲ್ಲಿ ಅಂದಿನ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿಯಲ್ಲಿ ಹಲವು ಬಾರಿ ಸಭೆಗಳಲ್ಲಿ ಎಚ್‌ಎಂಟಿ ವಶದಲ್ಲಿರುವ ಅರಣ್ಯ ಭೂಮಿಯ ಕುರಿತು ಚರ್ಚೆ ನಡೆಸಲಾಗಿತ್ತು. 2018ರ ಜುಲೈ 17 ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಇನ್ನೂ ಹಸಿರು ಹೊದಿಕೆಯನ್ನು ಹೊಂದಿದ್ದ ಅರಣ್ಯ ಭೂಮಿಯನ್ನು ಎಚ್‌ಎಂಟಿ ಸಂಸ್ಥೆಯು ಮಾರಾಟ ಮತ್ತು ಹರಾಜು ಮಾಡುತ್ತಿದ್ದು, ಇದು ಬೆಂಗಳೂರಿಗೆ ಜೀವ ಉಳಿಸುವ ಮತ್ತು ಅತ್ಯಗತ್ಯವಾದ ಉಸಿರಾಟಕಾರಕವಾಗಿದೆ (ಬೆಂಗಳೂರಿನಲ್ಲಿ ಹೆಚ್ಚು ಅಗತ್ಯವಿರುವ ಶ್ವಾಸಕೋಶದ ಸ್ಥಳ) ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು.
2020 ರ ಜುಲೈ 15ರಂದು ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಯಲ್ಲಿ ಸ್ಪಷ್ಟವಾಗಿ ದಾಖಲಿಸಲಾಗಿದೆ.
ಆದರೆ ಅಧಿಕಾರಿಗಳು ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. 2020 ರಲ್ಲಿ ವಿವಾದಿತ ಭೂಮಿಯ ಡಿನೊಟಿಫಿಕೇಶನ್ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಕೋರಿದೆ. ಅಧಿಕಾರಿಗಳು 14,300 ಕೋಟಿ ರೂ.ಮೌಲ್ಯದ ಅರಣ್ಯ ಭೂಮಿಯನ್ನು ಡಿನೋಟಿಫಿಕೇಶನ್ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿದೆ. ಕಾಯ್ದಿರಿಸಿದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಮಧ್ಯಂತರ ಅರ್ಜಿಯನ್ನು ಸಲ್ಲಿಸಿರುವುದು ಕರ್ತವ್ಯ ಲೋಪವಾಗಿರುತ್ತದೆ ಎಂದು ಅವರು ವಿವರಿಸಿದರು.
ಎಚ್‌ಎಂಟಿ ಸಂಸ್ಥೆಯು ಈ ಎಲ್ಲಾ ಭೂಮಿಯನ್ನು ಇತರೆ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿರುವುದರಿಂದ ರಾಜ್ಯಕ್ಕೆ ಭಾರೀ ಆರ್ಥಿಕ ನಷ್ಟವನ್ನು ಉಂಟಾಗುತ್ತದೆ ಮತ್ತು ಬೆಂಗಳೂರಿಗರ ಶ್ವಾಸಕೋಶದ ಸ್ಥಳವನ್ನು ಕಳೆದುಕೊಳ್ಳುತ್ತದೆ ಎಂಬುದು ಕಾನೂನು ಇಲಾಖೆಯ ಅಭಿಪ್ರಾಯವಾಗಿದೆ ಎಂದು ಸಚಿವರು ತಿಳಿಸಿದರು.

