ಬೆಂಗಳೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ವಿಧಾನಸೌಧದ ಆವರಣದಲ್ಲಿ ನಿರ್ಮಿಸಲಾದ 25 ಅಡಿ ಎತ್ತರದ ನಾಡದೇವಿ ಭುವನೇಶ್ವರಿ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾವರಣಗಳಿಸಿದರು.
ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇದ್ದು, ಮುಂಭಾಗದಲ್ಲಿ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ.
ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ, ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠೀಹಾರ, ಗಂಡಭೇರುಂಡ ಇರಲಿದೆ.
ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು
ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ, ನಗರಾಭಿವೃದ್ಧಿ ಸಚಿವ ಸುರೇಶ ಬಿ.ಎಸ್, ವಿಧಾನ ಪರಿಷತ್ ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್,
ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಗ್ಯಾರಂಟಿ ಯೋಜನಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ. ರೇವಣ್ಣ, ಶಿವಾಜಿನಗರ ವಿಧಾನಸಭಾ ಕ್ಷೇತ್ರ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

