ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಮನೆ, ಊರು ಖಾಲಿ ಮಾಡುತ್ತಿದ್ದಾರೆ. ಕೆಲವರು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಫೈನಾನ್ಸ್ ಕಿರುಕುಳಕ್ಕೆ ನಿನ್ನೆ ಮಂಡ್ಯದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಇಂದು ಮೃತಪಟ್ಟಿದ್ದಾರೆ. ಹಾಸನದಲ್ಲೂ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ತುಮಕೂರಿನಲ್ಲಿ ಓರ್ವ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಂಡ್ಯ, ಜನವರಿ 29: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (Micro finance) ಕಿರುಕುಳಕ್ಕೆ ಮತ್ತೊಂದು ಬಲಿ ಆಗಿದೆ. ನಿನ್ನೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವಂತಹ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ ನಡೆದಿದೆ. ಪ್ರೇಮಾ(59) ಮೃತ ಮಹಿಳೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚನ್ನಪಟ್ಟಣದ ಉಜ್ಜೀವನ್ ಬ್ಯಾಂಕ್ನಲ್ಲಿ 6 ಲಕ್ಷ ರೂ. ಸಾಲ ಪಡೆದಿದ್ದರು. 3 ತಿಂಗಳ ಕಂತು ಕಟ್ಟದ ಹಿನ್ನೆಲೆ 1 ವಾರದ ಹಿಂದೆಯಷ್ಟೇ ಪ್ರೇಮಾ ಮನೆ ಸೀಜ್ ಮಾಡಲಾಗಿತ್ತು. ಹೀಗಾಗಿ ಮನನೊಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಇಂದು ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರೇಮಾ ಮೃತಪಟ್ಟಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತದೇಹ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ.
ಮಿಮ್ಸ್ ಆಸ್ಪತ್ರೆ ಬಳಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲಾಗಿದೆ. ಫೈನಾನ್ಸ್ ಕಂಪನಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದು, ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಒದಗಿಸಲಾಗಿದೆ

