ಚನ್ನಪಟ್ಟಣ: ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ. ಇದಕ್ಕೆ ಅಗತ್ಯ ಮಾರ್ಗದರ್ಶನ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಲಹೆ ನೀಡಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ಡಾ. ವೆಂಕಟಪ್ಪ ಅವರು ತಮ್ಮ ಕಣ್ವ ಫೌಂಡೇಶನ್‌ನಿಂದ ನಿರ್ಮಿಸಿರುವ ಚನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ, ಅವರು ಮಾತನಾಡಿದರು.
ಸರ್ಕಾರಿ ಶಾಲೆಯಲ್ಲಿ ಓದಿ ದೊಡ್ಡ ಮಟ್ಟಕ್ಕೆ ಬೆಳೆದಿರುವವರು ಆ ಶಾಲೆಯ ಕಲ್ಯಾಣಕ್ಕೆ ಅಗತ್ಯ ನೆರವು ನೀಡುತ್ತಾರೆ. ಇದಕ್ಕೆ ಅಗತ್ಯ ಸಂಘಟನೆ ಆಗಬೇಕು. ವೆಂಕಟಪ್ಪನವರು ಮಾಡಿರುವ ಸಾಹಸಕ್ಕೆ ಇನ್ನು ಹೆಚ್ಚಿನ ಜನ ಕೈ ಹಾಕಬೇಕು. ಇಂತಹ ಕೆಲಸಗಳು ಸಮಾಜದಲ್ಲಿ ಅವರ ಹೆಸರುಗಳನ್ನು ಶಾಶ್ವತವಾಗಿ ಉಳಿಸುತ್ತವೆ ಎಂದು ತಿಳಿಸಿದರು.

