ರಾಯ್ಪುರ್: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 6 ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ AK-47 ಮತ್ತು SLR ರೈಫಲ್‌ಗಳು, ಸ್ಫೋಟಕಗಳು ಪತ್ತೆಯಾಗಿವೆ.
ನಾರಾಯಣಪುರ ಜಿಲ್ಲೆಯ ಅಬುಜ್‌ಮದ್ ಪ್ರದೇಶದ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ನಕ್ಸಲ್ ಭದ್ರಕೋಟೆಯಾದ ಅಬುಜ್‌ಮದ್ ಕೋರ್ ವಲಯದಲ್ಲಿ ಮಾವೋವಾದಿಗಳ ವಿರುದ್ಧ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಈ ಎನ್‌ಕೌಂಟರ್ ಸಹ ಒಂದಾಗಿದೆ.
ಈ ಪ್ರದೇಶದಲ್ಲಿ ಮಾವೋವಾದಿಗಳ ಚಲನವಲನದ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎನ್‌ಕೌಂಟರ್ ನಡೆದ ಸ್ಥಳದಲ್ಲಿ ಅಪಾರ ಪ್ರಮಾಣದ ಸ್ಫೋಟಕ, ಬಂದೂಕುಗಳು ಹಾಗೂ ದಿನಸಿ ಪದಾರ್ಥಗಳು ಪತ್ತೆಯಾಗಿವೆ. ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿದ್ದಾರೆ.
ಮಾವೋವಾದಿ ಪೀಡಿತ ಪ್ರದೇಶಗಳಲ್ಲಿ ನಕ್ಸಲರನ್ನು ನಿಗ್ರಹಿಸುವ ಪ್ರಯತ್ನದಲ್ಲಿ ಭದ್ರತಾ ಪಡೆಗಳು ಬಹು ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಲವು ದಿನಗಳ ಹಿಂದೆ 2026ರ ಮಾರ್ಚ್ 31ರೊಳಗೆ ಭಾರತ ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸುವುದಾಗಿ ಭರವಸೆ ನೀಡಿದ್ದರು. ನಕ್ಸಲಿಸಂ ಅನ್ನು ಕೊನೆಗೊಳಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಮೋದಿ ಕೂಡ ಪುನರುಚ್ಚರಿಸಿದ್ದಾರೆ.

