ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಇಂದು (ಮಂಗಳವಾರ) ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ, ಭೂಕುಸಿತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭಾರಿ ಮಳೆಯಿಂದಾಗಿ ಅನೇಕ ಜನರು ನಾಪತ್ತೆಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.ದಿಢೀರ್ ಪ್ರವಾಹದ ಪರಿಣಾಮ ನೀರಿನ ರಭಸಕ್ಕೆ ಹಲವು ಮನೆಗಳು ಭಾಗಶಃ ಕೊಚ್ಚಿ ಹೋಗಿವೆ ಎನ್ನಲಾಗಿದೆ.
ಧರಾಲಿ ಗ್ರಾಮದಲ್ಲಿ ಸಂಭವಿಸಿದ ಹಠಾತ್ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಪ್ರಶಾಂತ್ ಆರ್ಯ ದೃಢಪಡಿಸಿದ್ದಾರೆ. “ಆ ಪ್ರದೇಶದಲ್ಲಿ ಭಾರಿ ಪ್ರಮಾಣದ ಪ್ರವಾಹ ಉಂಟಾಯಿತು. ನಾವು ಪ್ರಸ್ತುತ ಜೀವ ಮತ್ತು ಆಸ್ತಿಪಾಸ್ತಿಗೆ ಆಗಿರುವ ಹಾನಿಯ ಪ್ರಮಾಣವನ್ನು ನಿರ್ಣಯಿಸುತ್ತಿದ್ದೇವೆ” ಎಂದು ಆರ್ಯ ಹೇಳಿದರು. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಗಳಿಗೆ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.
ಪೀಡಿತ ಪ್ರದೇಶದಲ್ಲಿ ಹಲವಾರು ಸಣ್ಣ ಅತಿಥಿ ಗೃಹಗಳು, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿವೆ ಎಂದು ಆರ್ಯ ಹೇಳಿದರು.”ಇದನ್ನು ಗಮನದಲ್ಲಿಟ್ಟುಕೊಂಡು, ನಾವು ಅದಕ್ಕೆ ಅನುಗುಣವಾಗಿ ರಕ್ಷಣಾ ತಂಡಗಳನ್ನು ಕಳುಹಿಸಿದ್ದೇವೆ. ತಹಸಿಲ್ ಮತ್ತು ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ತಂಡಗಳು ಈಗಾಗಲೇ ಸ್ಥಳಕ್ಕೆ ತಲುಪಿವೆ” ಎಂದು ಅವರು ಹೇಳಿದರು.
ಏತನ್ಮಧ್ಯೆ, ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಮೇಘಸ್ಫೋಟದಿಂದ ಉಂಟಾದ ವ್ಯಾಪಕ ಹಾನಿಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದರು.

