ಬೆಂಗಳೂರು:- ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇವಲ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಕೆಲವೆಡೆ ಕೂಡ ಹೆಚ್ಚು ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದಾದ್ಯಂತ, ವಿಶೇಷವಾಗಿ ಕರ್ನಾಟಕ, ಕೇರಳ, ಮತ್ತು ತಮಿಳುನಾಡಿನಲ್ಲಿ ನಿರಂತರ ಮಳೆಯಾಗುವ ಸಾಧ್ಯತೆಯಿದೆ. ಈ ವಾಯುಭಾರ ಕುಸಿತದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಆಗಸ್ಟ್ 16 ರಿಂದ 21 ರವರೆಗೆ ಮಳೆಯಾಗುವ ಮುನ್ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯ ಸಾಧ್ಯತೆಯಿದೆ, ಆದರೆ ಬೆಂಗಳೂರು ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಗಾಳಿಯೊಂದಿಗೆ ಮಳೆಯಾಗಲಿದೆ.

