ಮೈಸೂರು: ಸೆ.22 ರಿಂದ 25 ರವರೆಗೆ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ 2025ರ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ಕುಸ್ತಿಪಟು ವಿನೇಶ್ ಪೋಗಟ್ ಅವರಿಗೆ ಅಹ್ವಾನ ನೀಡಲಾಗಿದೆ.
ವಿನೇಶ್ ಫೋಗಟ್ ಅವರು ಕಾಮನ್‌ವೆಲ್ತ್ ಮತ್ತು ಏಷ್ಯಿಯನ್ ಪಂದ್ಯಗಳಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೆಬ್ರವರಿ.18. 2019 ರಂದು ನಡೆದ ಲಾರೆನ್ಸ್ ವರ್ಲ್ಡ್ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡ ಮೊದಲ ಭಾರತೀಯ ಕ್ರೀಡಾಪಟುವಾಗಿದ್ದಾರೆ.
ಸೆ. 22 ರಂದು ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟ ಉದ್ಘಾಟಿಸಲಿದ್ದು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ವಿನೇಶ್ ಪೋಗಟ್ ಭಾಗವಹಿಸಲಿದ್ದಾರೆ.
ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ವತಿಯಿಂದ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಕಲಾಮಂದಿರದ ಸುಚಿತ್ರಾ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಿದ್ದ “ದಸರಾ ಛಾಯಾಚಿತ್ರ ಪ್ರದರ್ಶನಕ್ಕೆ” ಚಾಲನೆ ನೀಡಿದರು.
ಈ ವೇಳೆ ಶಾಸಕ ತನ್ವೀರ್ ಸೇಠ್ , ವಿಧಾನ ಪರಿಷತ್ ಸದಸ್ಯ ಕೆ.ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಸಂಘದ ಅಧ್ಯಕ್ಷ ಪ್ರಗತಿ ಗೋಪಾಲಕೃಷ್ಣ, ಉಪಾಧ್ಯಕ್ಷ ಮಧುಸೂದನ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಯಾದವ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನುರಾಗ್ ಬಸವಣ್ಣ, ಉದಯ್ ಶಂಕರ್, ಕೆ.ಚಂದ್ರು, ನಾಗೇಶ್ ಪಣತ್ತಲೆ, ರವಿ ಗವಿಮಠ, ಕೃಷ್ಣೋಜಿರಾವ್, ಅನೂಪ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

