ಬೆಂಗಳೂರು : ದಸರಾ ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ 2300ಕ್ಕೂ ಅಧಿಕ ವಿಶೇಷ ಬಸ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ. ಸೆಪ್ಟೆಂಬರ್ 26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅ.2 ಮತ್ತು 5ರಂದು ವಿವಿಧ ಕಡೆಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಸಂಚಾರ ಇರಲಿದೆ.
ಕರ್ನಾಟಕ ಸಾರಿಗೆ (ವೇಗದೂತ), ರಾಜಹಂಸ, ಸ್ವೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಅಕ್ಸಲ್) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ಸಂಚಾರ ಇರಲಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಬಸ್‌ಗಳು ಹೊರಡಲಿವೆ. ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಕೊಲ್ಲೂರು, ಗೋಕರ್ಣ, ವಿವಿಧ ಜಿಲ್ಲಾ ಕೇಂದ್ರಗಳು ಹಾಗೂ ನೆರೆ ರಾಜ್ಯಗಳ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪುಣೆ, ಎರ್ನಾಕುಳಂ, ಪಾಲ್‌ಘಾಟ್ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಬಸ್‌ಗಳ ಕಾರ್ಯಾಚರಣೆ ಇರಲಿದೆ.
ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 260 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಇರಲಿದೆ. ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್. ಅಣೆಕಟ್ಟು, ಶ್ರೀರಂಗಪಟ್ಟಣ. ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಎಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆಗೂ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ‘ಪ್ರೈ ಬಸ್’ ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಸೆ.27 ರಿಂದ ಅ.7ರವರೆಗೆ ಮೈಸೂರಿನಲ್ಲಿ ಗಿರಿದರ್ಶಿನಿ, ಜಲದರ್ಶಿನಿ, ದೇವದರ್ಶಿನಿ ವಿಶೇಷ ಪ್ರವಾಸ ಕಾರ್ಯಾಚರಣೆ ಇದೆ.

