ಹೈದರಾಬಾದ್: ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಬಳಿ ಘನಘೋರ ದುರಂತ ಸಂಭವಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸು ಹೊತ್ತಿ ಉರಿದು ಕನಿಷ್ಠ 19ಕ್ಕೂ ಹೆಚ್ಚು ಜನ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.
ಕಾವೇರಿ ಹೆಸರಿನ ವೋಲ್ವೋ ಬಸ್ಸಿನಲ್ಲಿ 44 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಶುಕ್ರವಾರ ಬಳಗಿನ ಜಾವ 3 ಗಂಟೆಯ ವೇಳೆಗೆ ವೇಗವಾಗಿ ಬಂದ ಬೈಕ್ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ನಂತರ ಬೈಕ್ ಬಸ್ಸಿನ ಕೆಳಗಡೆಯಿಂದ ಮುಂದಕ್ಕೆ ಹೋಗಿ ಇಂಧನ ಟ್ಯಾಂಕ್‌ಗೆ ಬಡಿದಿದೆ. ಹಿಂಭಾಗದಲ್ಲಿರುವ ಇಂಧನ ಟ್ಯಾಂಕ್‌ಗೆ ಬೈಕ್ ಡಿಕ್ಕಿ ಬಡಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ನಿಮಿಷದಲ್ಲಿ ಬೆಂಕಿ ಇಡೀ ಬಸ್ಸನ್ನು ಆವರಿಸಿದೆ.
ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಪಾರಾದರೂ ಕನಿಷ್ಠ 19 ಮಂದಿ ಜೀವಂತವಾಗಿ ಸುಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರನ್ನು ಕರ್ನೂಲ್ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಪ್ರಯಾಣಿಕರು ಹೈದರಾಬಾದ್ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಆಗಮಿಸಿದವು. ರಕ್ಷಣಾ ತಂಡಗಳು ಸ್ಥಳಕ್ಕೆ ಬರುವಷ್ಟರಲ್ಲಿ ಬಸ್ಸು ಬಹುತೇಕ ಸುಟ್ಟುಹೋಗಿತ್ತು. ಈಗ ಅಧಿಕಾರಿಗಳು ಮೃತ ವ್ಯಕ್ತಿಗಳ ಗುರುತು ಪತ್ತೆ ಹಚ್ಚುವ ಕೆಲಸ ಆರಂಭಿಸಿದ್ದಾರೆ.
ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ದುರಂತ ಹೇಗಾಯ್ತು?
ಕೆಲವರು ವೇಗವಾಗಿ ಬಂದ ಬೈಕ್ ಸವಾರ ಬಸ್ಸಿನ ಹಿಂಬದಿಗೆ ಗುದ್ದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರೆ ಕೆಲವರು ಬಸ್ಸು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನುತ್ತಿದ್ದಾರೆ. ಒಂದು ವೇಳೆ ಮುಖಾಮುಖಿ ಡಿಕ್ಕಿ ಹೊಡೆದಿದ್ದರೆ ಚಾಲಕ ಬಸ್ಸನ್ನು ನಿಲ್ಲಿಸಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ.
ಗುದ್ದಿದ ರಭಸಕ್ಕೆ ಬಸ್ಸಿನ ಕೆಳಭಾಗಕ್ಕೆ ಬೈಕ್ ನುಗ್ಗಿದೆ. ಕೆಳಭಾಗದಲ್ಲಿ ಸಿಲುಕಿಕೊಂಡಿದ್ದ ಬೈಕನ್ನು ಬಸ್ಸು 300 ಮೀ. ದೂರದವರೆಗೆ ಎಳೆದುಕೊಂಡು ಹೋಗಿದೆ. ಈ ವೇಳೆ ಬೈಕಿನಲ್ಲಿದ್ದ ಪೆಟ್ರೋಲ್ ಕೆಳಕ್ಕೆ ಚೆಲ್ಲಿದೆ. ರಸ್ತೆಯಲ್ಲಿ ಬೈಕನ್ನು ಎಳೆದುಕೊಂಡು ಹೋಗಿದ್ದರಿಂದ ಘರ್ಷಣೆಯಿಂದಾಗಿ ಕಿಡಿ ಹೊತ್ತಿದೆ. ಬೆಂಕಿಯ ಕಿಡಿ ಡೀಸೆಲ್ ಟ್ಯಾಂಕ್ ಮೇಲೆ ಚಿಮ್ಮಿದೆ. ಟ್ಯಾಂಕ್‌ಗೆ ಕಿಡಿ ಚಿಮ್ಮಿದ ಕೂಡಲೇ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದೆ.
ಬೆಂಗಳೂರು ಮತ್ತು ಹೈದರಾಬಾದ್ ಮಧ್ಯೆ 575 ಕಿ.ಮೀ ಅಂತರವಿರುವುದರಿಂದ ಇಬ್ಬರು ಚಾಲಕರು ಬಸ್ಸಿನಲ್ಲಿದ್ದರು. ಸಾಧಾರಣವಾಗಿ ದೀರ್ಘ ಪ್ರಯಾಣಕ್ಕೆ ಇಬ್ಬರು ಚಾಲಕರನ್ನು ನಿಯೋಜಿಸಲಾಗುತ್ತದೆ. ದುರಂತ ನಡೆದ ಬಳಿಕ ಬಸ್ಸು ಚಾಲನೆ ಮಾಡುತ್ತಿದ್ದ ಚಾಲಕ ಪರಾರಿಯಾಗಿದ್ದರೆ ಮತ್ತೊಬ್ಬ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡವು ಆಗಮಿಸಿ ತನಿಖೆ ನಡೆಸುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಾಂತ್ ತಿಳಿಸಿದ್ದಾರೆ. ಆಂಧ್ರದ ಕರ್ನೂಲ್ ಬಳಿಯ ಚಿನ್ನಟೇಕೂರು ಈ ದುರಂತ ಸಂಭವಿಸಿ 19 ಮಂದಿ ಮೃತಪಟ್ಟಿದ್ದಾರೆ. ಸ್ಲೀಪರ್ ಕೋಚ್ ಬಸ್ಸು ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ದುರ್ಮರಣ
ಕರ್ನೂಲ್ ಬಳಿ ಸಂಭವಿಸಿದ ಭೀಕರ ಬಸ್ ಬೆಂಕಿ ದುರಂತದಲ್ಲಿ ) ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಸುಮಾರು 20 ಜನರು ಸಜೀವ ದಹನವಾಗಿದ್ದಾರೆ. 12 ಜನರು ಗಾಯಗೊಂಡಿದ್ದಾರೆ. ದುರಂತದಲ್ಲಿ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಇವರಲ್ಲಿ ಇಬ್ಬರು ಮಕ್ಕಳು ಸಹ ಸೇರಿದ್ದಾರೆ ಎಂದು ಗೊತ್ತಾಗಿದೆ.
ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಘೋಷಿಸಿದ ಪ್ರಧಾನಿ ಮೋದಿ
ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು 15 ಮಂದಿ ಸಜೀವ ದಹನರಾಗಿದ್ದು, ಈ ಘಟನೆ ಸಂಬಂಧ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಮೋದಿ ಸಂತಾಪ ಸೂಚಿಸಿದ್ದಾರೆ.ಇಂತಹ ಕಷ್ಟದ ಸಮಯದಲ್ಲಿ ಸಂತ್ರಸ್ತರ ಕುಟುಂಬಗಳ ಜತೆ ನಾವಿದ್ದೇವೆ. ಘಟನೆಯಲ್ಲಿ ಗಾಯಗೊಂಡಿರುವ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ಎಂದು ಮೋದಿ ತಿಳಿಸಿದ್ದಾರೆ.ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ನೀಡಲಾಗುವುದು ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಕೊಡಲಾಗವುದು ಎಂದು ಮೋದಿ ಹೇಳಿದ್ದಾರೆ.

