ತಿರುವನಂತಪುರಂ, ನವೆಂಬರ್ 25: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ (IMD) ಕೇರಳದ ಏಳು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಸೋಮವಾರ (ನ.24) ರಾಜ್ಯದ ಹಲವೆಡೆ ವ್ಯಾಪಕ ಮಳೆಯಾಗಿದ್ದು, ವರುಣಾರ್ಭಟ ಜೋರಾಗುತ್ತಿದ್ದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ ದಿನಗಳಲ್ಲಿ 6ರಿಂದ 11 ಸೆಂ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದೆ.
ಐಎಂಡಿ ಮಾಹಿತಿ ಪ್ರಕಾರ,
ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ 7ರಿಂದ 11 ಸೆಂ.ಮೀ ಮಳೆಯಾಗುವ ಸಂಭವವಿದ್ದು, ಇದಕ್ಕೆ ಜೊತೆಗೆ ಗುಡುಗು–ಮಿಂಚು ಹಾಗೂ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

