ನವದೆಹಲಿ: ಚುನಾವಣಾ ಪ್ರಕ್ರಿಯೆಯಲ್ಲಿ ವ್ಯಾಪಕವಾಗಿ ‘ವೋಟ್ ಚೋರಿ’ ನಡೆಯುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಭಾನುವಾರ ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ‘ವೋಟ್ ಚೋರ್ ಗದ್ದಿ ಛೋಡ್ ಮಹಾ ರ‍್ಯಾಲಿ’ಯನ್ನು ಆಯೋಜಿಸಿದೆ.
ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಚುನಾವಣೆ ಪ್ರಕ್ರಿಯೆಯ ಪಾರದರ್ಶಕತೆ, ಮತದಾನದ ನೈತಿಕತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ಉದ್ದೇಶದಿಂದ ಈ ಮಹಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಕೇಂದ್ರ ಸರ್ಕಾರ ಹಾಗೂ ಚುನಾವಣಾ ವ್ಯವಸ್ಥೆಯ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇದ್ದು, ರಾಷ್ಟ್ರ ರಾಜಕೀಯದಲ್ಲಿ ಈ ಸಮಾವೇಶ ಮಹತ್ವ ಪಡೆದುಕೊಳ್ಳಲಿದೆ.

