ಬೆಳಗಾವಿ, ಜನವರಿ 7: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ ಮೇಲೆ ನಡೆದ ಹತ್ಯೆ ಯತ್ನ ಪ್ರಕರಣದಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ನಿನ್ನೆ ನಡೆದ ಚಾಕು ಇರಿತ ಘಟನೆಗೆ ಸಂಬಂಧಿಸಿದಂತೆ ಶಿವಯ್ಯ ಪೂಜಾರಿ, ನಿತೇಶ್ ಬಡಿಗೇರ, ಮೌನಪ್ಪ ಹಾಗೂ ಸಂಪತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಬಸವಂತ ಅವರ ಸ್ನೇಹಿತ ಮದನ ನೀಡಿದ ದೂರಿನ ಮೇರೆಗೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ಬೆಳಗಾವಿ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಮಾತನಾಡಿ, “ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುತ್ತದೆ. ಹಲ್ಲೆಗೊಳಗಾದ ಬಸವಂತ ಹಾಗೂ ಆರೋಪಿಗಳು ಪರಸ್ಪರ ಸ್ನೇಹಿತರಾಗಿದ್ದರು. ಹಲ್ಲೆಗೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದುಬರಲಿದೆ” ಎಂದು ತಿಳಿಸಿದ್ದಾರೆ. ಘಟನೆ ನಡೆದ ಕೇವಲ 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿರುವುದರಿಂದ ಪೊಲೀಸ್ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

