ಬೆಂಗಳೂರು: ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪರಿಣಾಮವಾಗಿ ಶುಕ್ರವಾರ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಚಂಡಮಾರುತದ ಪ್ರಭಾವದಿಂದಾಗಿ ಮಳೆಯ ಜೊತೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ನಿರೀಕ್ಷೆಯಿದೆ. ಇದರಿಂದ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯೂ ಇದೆ.
ಈ ಬಾರಿ ಕರ್ನಾಟಕದಲ್ಲಿ ಚಳಿ ಹೆಚ್ಚು ಅನುಭವವಾಗುತ್ತಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನ ತೀವ್ರವಾಗಿ ಇಳಿಕೆಯಾಗಿದ್ದು, ಕೆಲವೆಡೆ ಶೀತಗಾಳಿಯಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿಯೂ ಚಳಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮುಂಜಾನೆ ಹಾಗೂ ರಾತ್ರಿ ಸಮಯದಲ್ಲಿ ವಿಪರೀತ ಚಳಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ದಟ್ಟ ಮಂಜು ಆವರಿಸಿರುವ ಕಾರಣ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

