ಬಳ್ಳಾರಿ, ಜ.17: ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಶಾಸಕ ನಾನಾ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ನಡೆದ ಗಲಾಟೆಯಲ್ಲಿ ಸಾವನ್ನಪ್ಪಿದ್ದ ರಾಜಶೇಖರ ರೆಡ್ಡಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ.
ನಗರದಲ್ಲಿರುವ ರಾಜಶೇಖರ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಪರಿಷತ್ ಪ್ರತಿಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ ಪಕ್ಷದ ಪ್ರಮುಖರು, ಮೃತರ ತಾಯಿಗೆ ಹತ್ತು ಲಕ್ಷ ರೂ. ನಗದು ಹೊಂದಿದ ಚೆಕ್ಕನ್ನು ಹಸ್ತಾಂತರಿಸಿದರು.
ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನೇತೃತ್ವದ ಕಾಂಗ್ರೆಸ್ ನಿಯೋಗವು ಕೆಪಿಸಿಸಿ ವತಿಯಿಂದ ರಾಜಶೇಖರ ರೆಡ್ಡಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿತ್ತು. ಇದರ ಬೆನ್ನಲ್ಲೇ ಬಿಜೆಪಿ ಕೂಡ 10 ಲಕ್ಷ ರೂ. ಪರಿಹಾರ ನೀಡಿರುವುದು ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಮೃತ ರಾಜಶೇಖರ ರೆಡ್ಡಿ ಅವರ ತಾಯಿ, ಸಹೋದರ ಹಾಗೂ ಸಹೋದರಿಯನ್ನು ಭೇಟಿಯಾಗಿ ಸಾಂತ್ವನ ಹೇಳಿದ ಬಿಜೆಪಿ ನಿಯೋಗ, ಪ್ರಕರಣಕ್ಕೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿತು. ಇದು ಆಕಸ್ಮಿಕ ಘಟನೆ; ನಡೆದಿರುವುದು ವೈಯಕ್ತಿಕವಾಗಿ ನೋವು ತಂದಿದೆ ಎಂದು ಹೇಳಿದ ನಾಯಕರು, ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅಭಯ ನೀಡಿದರು.

