ಬೆಂಗಳೂರು, ಜನವರಿ 23: ವಿಶ್ವದ ಅತಿಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ಭಾರತದ ಸಿಲಿಕಾನ್ ಸಿಟಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿದೆ. ನೆದರ್ಲೆಂಡ್ಸ್ ಮೂಲದ ‘ಟಾಮ್‌ಟಾಮ್’ ಸಂಸ್ಥೆ ಪ್ರಕಟಿಸಿರುವ 2025ರ ಸಂಚಾರ ಸೂಚ್ಯಂಕ (Traffic Index) ವರದಿಯಲ್ಲಿ ಈ ಅಂಶ ಬಹಿರಂಗವಾಗಿದೆ. ಪಟ್ಟಿಯಲ್ಲಿ ಮೆಕ್ಸಿಕೊ ನಗರ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಎರಡನೇ ಸ್ಥಾನದಲ್ಲಿದೆ.
ವರದಿ ಪ್ರಕಾರ, 2025ರಲ್ಲಿ ಬೆಂಗಳೂರಿನ ಸರಾಸರಿ ಸಂಚಾರ ದಟ್ಟಣೆ ಶೇ.74.4ಕ್ಕೆ ತಲುಪಿದೆ. 2024ರಲ್ಲಿ ಇದು ಶೇ.72.7 ಆಗಿದ್ದು, ಒಂದೇ ವರ್ಷದಲ್ಲಿ ಶೇ.1.7ರಷ್ಟು ಸಂಚಾರ ದಟ್ಟಣೆ ಹೆಚ್ಚಳ ಕಂಡಿದೆ. ನಗರದಲ್ಲಿ ವಾಹನಗಳ ಸಂಖ್ಯೆಯ ಏರಿಕೆ, ರಸ್ತೆ ಮೂಲಸೌಕರ್ಯದ ಮೇಲಿನ ಒತ್ತಡ ಹಾಗೂ ನಿರಂತರ ಕಾಮಗಾರಿಗಳು ಸಂಚಾರ ಸಮಸ್ಯೆಯನ್ನು ಮತ್ತಷ್ಟು ತೀವ್ರಗೊಳಿಸುತ್ತಿವೆ ಎಂದು ವರದಿ ತಿಳಿಸಿದೆ.
ವಾಹನ ಸಂಚಾರದ ಸರಾಸರಿ ವೇಗದಲ್ಲಿ ಸ್ವಲ್ಪ ಸುಧಾರಣೆ ಕಂಡುಬಂದರೂ, ಸಂಚಾರದ ಒತ್ತಡ ಕಡಿಮೆಯಾಗಿಲ್ಲ. 2024ರಲ್ಲಿ ಗಂಟೆಗೆ 16.6 ಕಿಲೋಮೀಟರ್ ಇದ್ದ ಸರಾಸರಿ ವೇಗ, 2025ರಲ್ಲಿ 17.6 ಕಿಲೋಮೀಟರ್‌ಗೆ ಏರಿಕೆಯಾಗಿದೆ. 15 ನಿಮಿಷಗಳಲ್ಲಿ ಸರಾಸರಿ ಸಂಚರಿಸಬಹುದಾದ ದೂರವೂ 2024ರ 4.2 ಕಿಲೋಮೀಟರ್‌ನಿಂದ 2025ರಲ್ಲಿ 4.4 ಕಿಲೋಮೀಟರ್‌ಗೆ ಹೆಚ್ಚಾಗಿದೆ.
ಇನ್ನೊಂದೆಡೆ, ಬೆಂಗಳೂರು ನಗರದಲ್ಲಿ 10 ಕಿಲೋಮೀಟರ್ ದೂರ ಕ್ರಮಿಸಲು ಸರಾಸರಿ 36 ನಿಮಿಷ 9 ಸೆಕೆಂಡ್ ಸಮಯ ಬೇಕಾಗುತ್ತಿದೆ, ಇದು ದಿನನಿತ್ಯದ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸಂಚಾರ ದಟ್ಟಣೆ ಪಟ್ಟಿಯಲ್ಲಿ ದುಬೈ ಮೂರನೇ, ಪೊಲ್ಯಾಂಡ್‌ನ ಲೊಡ್ಜ್ ನಾಲ್ಕನೇ ಸ್ಥಾನದಲ್ಲಿದ್ದರೆ, ಭಾರತದ ಪುಣೆ ಐದನೇ ಸ್ಥಾನ ಪಡೆದುಕೊಂಡಿದೆ. ಮುಂಬೈ ಈ ಪಟ್ಟಿಯಲ್ಲಿ 18ನೇ ಸ್ಥಾನದಲ್ಲಿದೆ.
ವಿಶ್ವದ ಪ್ರಮುಖ ಐಟಿ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರು, ಸಂಚಾರ ದಟ್ಟಣೆಯಲ್ಲೂ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ನಗರಾಭಿವೃದ್ಧಿ ಮತ್ತು ಸಂಚಾರ ನಿರ್ವಹಣೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

