ಮೈಸೂರು, ಫೆಬ್ರವರಿ 9: ಹಳೆ ವಸ್ತುಗಳನ್ನು ಸಂಗ್ರಹಿಸಿಡುವ ಗುಜರಿಗೆ ಭಾರೀ ಬೆಂಕಿ ) ಬಿದ್ದ ಪರಿಣಾಮ ಸಾಲು ಸಾಲು ಗೋದಾಮುಗಳು ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರು ಹೊರವಲಯದ ಹಳೆ ಕೆಸರೆ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.
ಮೈಸೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿಯ ಹಳೆ ಕೆಸರೆ ಗ್ರಾಮದ ಗುಜರಿಗೆ ಬೆಳಗ್ಗೆ ಸುಮಾರು 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಗುಜರಿಯಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಟಿಕ್, ಕಬ್ಬಿಣ, ಮರ ಸೇರಿದಂತೆ ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಕವಾಗಿ ಹರಡಿದೆ.
ಬೆಂಕಿ ತೀವ್ರಗೊಂಡ ಬಳಿಕ ಸ್ಥಳೀಯರು ಬೆಳಗ್ಗೆ 4.30ರ ವೇಳೆಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರವಾಗಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಿರುವುದರಿಂದ ಇನ್ನೂ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಲವು ಗೋದಾಮುಗಳು ಇನ್ನೂ ಹೊತ್ತಿ ಉರಿಯುತ್ತಿವೆ.
ಈ ಅಗ್ನಿ ಅವಘಡದಲ್ಲಿ 12ಕ್ಕೂ ಹೆಚ್ಚು ವಿವಿಧ ರೀತಿಯ ಗೋದಾಮುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿನಷ್ಟ ಸಂಭವಿಸಿದೆ ಎನ್ನಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಘಟನೆ ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಅವಘಡದ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಹಾಗೂ ಅಗ್ನಿಶಾಮಕ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

