ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಇಂದು ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್‌ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದೆ. ಮೊದಲು ಎಕ್ಸ್‌ಯುವಿ ಕಾರು ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅವಘಡ ಸಂಭವಿಸಿದೆ ಎಂದು ಪೊಲೀಸರು ಪ್ರಾಥಮಿಕ ಮಾಹಿತಿ ನೀಡಿದ್ದಾರೆ.
ಅಪಘಾತಕ್ಕೀಡಾದ XUV 700 ಕಾರು (ಸಂಖ್ಯೆ KA-03 NW-0138) ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಪ್ರಯಾಣಿಸುತ್ತಿತ್ತು. ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಆರು ಮಂದಿ ಬೆಂಗಳೂರಿನ ಕೊತ್ತನೂರು ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಮೃತರ ಪೂರ್ಣ ಗುರುತು ಇನ್ನೂ ಪತ್ತೆಯಾಗಿಲ್ಲ.
ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ದಾರುಣ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

