ಬೆಂಗಳೂರು, ಫೆ.18: ರಾಜ್ಯ ರಾಜಧಾನಿ ಬೆಂಗಳೂರುನಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 10:30ರ ವೇಳೆಗೆ ಚಂದ್ರಾ ಲೇಔಟ್ ಪ್ರದೇಶದ ಬಿಎಂಟಿಸಿ ಡಿಪೋ ಸಮೀಪ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆ ನಡೆದ ವೇಳೆ ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಎಂದು ತಿಳಿದು ಬಂದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಆತಂಕಕ್ಕೊಳಗಾದರು. ಕೆಲಕಾಲ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು ಭಾರೀ ನಷ್ಟ ಉಂಟಾಗಿದೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಪೊಲೀಸರು ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಖಾಸಗಿ ಬಸ್ ಯಾರಿಗೆ ಸೇರಿದ್ದು ಹಾಗೂ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

