ಬೆಂಗಳೂರು, ಫೆ. 20: ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆ ಸಮಾಜದ ಶಾಂತಿ ಮತ್ತು ಸೌಹಾರ್ದತೆಗೆ ಮಾರಕವಾಗಿದ್ದು, ಇದನ್ನು ನಾನು ಹಾಗೂ ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಘಟನೆಯ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಅವರು, ನಿಷ್ಪಕ್ಷಪಾತ ತನಿಖೆ ನಡೆಸಿ ದುಷ್ಕೃತ್ಯ ಎಸಗಿದವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದರು.
ಪ್ರಕರಣದ ಸಂಬಂಧ ಈಗಾಗಲೇ ಕೆಲವು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಘಟನೆಗೆ ಕಾರಣರಾದ ಪ್ರತಿಯೊಬ್ಬರಿಗೂ ತಕ್ಕ ಶಿಕ್ಷೆ ನಿಶ್ಚಿತವಾಗಲಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.
ನಾಡಿನ ಜನತೆಗೆ ಭಯಮುಕ್ತ ಮತ್ತು ನೆಮ್ಮದಿಯ ಬದುಕು ನೀಡುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಜನರ ಶಾಂತಿ-ನೆಮ್ಮದಿಗೆ ಭಂಗ ತರುವ ಯಾವುದೇ ವ್ಯಕ್ತಿ ಅಥವಾ ಶಕ್ತಿಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ಯಾವುದೇ ಪ್ರಚೋದನೆಗಳಿಗೆ ಒಳಗಾಗದೇ ಸಂಯಮದಿಂದ ವರ್ತಿಸಬೇಕು. ಪೊಲೀಸ್ ಇಲಾಖೆ ತನ್ನ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

