ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಗುರುವಾರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಬಳ್ಳಾರಿ ಜಿಲ್ಲೆಯ 35 ಮಂದಿ ಹಾಗೂ ಚಿತ್ರದುರ್ಗ ಜಿಲ್ಲೆಯ 15 ಮಂದಿ ಸೇರಿ ಒಟ್ಟು 246 ಕನ್ನಡಿಗರು ಮಾರ್ಚ್ 4ರಂದು ಶಾರ್ಜಾದಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅವರಲ್ಲಿ 50 ಮಂದಿ ಕೊಚ್ಚಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ.
ಕೊಚ್ಚಿಯಿಂದ ಬೆಂಗಳೂರಿಗೆ ಬಂದಿಳಿದ ಕನ್ನಡಿಗರನ್ನು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಹಾಗೂ ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ವೇಳೆ ಶಾಸಕರು ಹಾಗೂ ರಾಜ್ಯ ಸರ್ಕಾರದ ಸಹಾಯವನ್ನು ಸ್ಮರಿಸಿದ ಕನ್ನಡಿಗರು ಧನ್ಯವಾದ ಸಲ್ಲಿಸಿದರು. ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ ಹಿನ್ನೆಲೆಯಲ್ಲಿ ಅವರು ಸಂತೋಷ ವ್ಯಕ್ತಪಡಿಸಿದರು.
ದುಬೈ ಪ್ರವಾಸಕ್ಕೆ ತೆರಳಿದ್ದ ಬಳ್ಳಾರಿ ಜಿಲ್ಲೆಯ ಸುಮಾರು 32 ಪ್ರವಾಸಿಗರು ಅಲ್ಲಿನ ಮುನುಕುಲ್ ನಗರದಲ್ಲಿ ವಿಮಾನಯಾನ ಸೇವೆಗಳು ರದ್ದಾದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಇದೀಗ ಸರ್ಕಾರದ ಸಹಕಾರದಿಂದ ಅವರು ಸುರಕ್ಷಿತವಾಗಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ.

