ಬೆಂಗಳೂರು, ಮಾರ್ಚ್ 08: ಬೆಂಗಳೂರು–ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಭಾನುವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ನಡೆದಿದೆ.
ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23) ಹಾಗೂ ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಫರಾಜ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರ ಮಾಹಿತಿ ಪ್ರಕಾರ, ನಾಲ್ವರು ಸ್ನೇಹಿತರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮುಂಭಾಗದಲ್ಲಿ ಸಾಗುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಈ ಕುರಿತು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

