ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಕೇಬಲ್ ತಯಾರಿಕಾ ಕಂಪನಿಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಅಡ್ವಾನ್ಸ್ ಕೇಬಲ್ ಯುನಿಟ್–2 ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಧಗಧಗನೆ ಹೊತ್ತಿ ಉರಿದ ಪರಿಣಾಮ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಪ್ಲಾಸ್ಟಿಕ್ ಕೇಬಲ್ ತಯಾರಿಸುವ ಈ ಕಂಪನಿಯಲ್ಲಿ ಮೊದಲಿಗೆ ಮರದ ಪೀಸ್‌ಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಬೆಂಕಿ ವ್ಯಾಪಕವಾಗಿ ಹರಡಿದೆ. ಘಟನೆಯಿಂದ ಕಂಪನಿಯಿಂದ ಮುಗಿಲೆತ್ತರಕ್ಕೆ ಹೊಗೆ ಚಿಮ್ಮಿದ್ದು ಸುತ್ತಮುತ್ತಲಿನ ಪ್ರದೇಶ ಕಪ್ಪು ಹೊಗೆಯಿಂದ ಆವರಿಸಿತ್ತು.
ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಮೂರಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

