ಬೆಂಗಳೂರು: ಸ್ಕೂಟರ್‌ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ಮೈಸೂರು ರಸ್ತೆಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. ನಿನ್ನೆ ಸಂಜೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮೃತ ವಿದ್ಯಾರ್ಥಿನಿಯನ್ನು ಕೃತಿಕಾ (21) ಎಂದು ಗುರುತಿಸಲಾಗಿದೆ. ಆಕೆ ಆರ್‌ಆರ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದರು. ಅಪಘಾತದಲ್ಲಿ ಆಕೆಯ ಸ್ನೇಹಿತೆ ಹಂಸ (21) ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಾಹಿತಿಯ ಪ್ರಕಾರ, ನಿನ್ನೆ ಸಂಜೆ ಕಾಲೇಜು ಮುಗಿಸಿಕೊಂಡು ಕೃತಿಕಾ ಮತ್ತು ಹಂಸ ಆಕ್ಟಿವಾ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಕಾಲೇಜಿನ ಗೇಟ್ ಹೊರಭಾಗದಲ್ಲಿ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಅತಿವೇಗವಾಗಿ ಬಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.
ಭೀಕರ ಡಿಕ್ಕಿಯ ಪರಿಣಾಮ ಕೃತಿಕಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಂಸಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ತಕ್ಷಣವೇ ಹಂಸ ಅವರನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

