ಬೆಂಗಳೂರು, ಮಾರ್ಚ್ 16: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸಮರ್ಪಕವಾಗಿ ಉತ್ತರ ನೀಡದ ಹಿನ್ನೆಲೆ ಸಭೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ನಡೆದಿದೆ. ಸ್ಪೀಕರ್ ಯು.ಟಿ. ಖಾದರ್ ಸಿಟ್ಟುಗೊಂಡು ಸದನವನ್ನು ಮುಂದೂಡಿದಷ್ಟೇ ಅಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಕೆಯಿಂದ ಪರಿಸ್ಥಿತಿ ಶಮನಗೊಂಡು ಸಭೆ ಪುನರಾರಂಭವಾಯಿತು.
ಈ ವಿಚಾರ ಗಂಭೀರವಾಗಿ ಪರಿಗಣಿಸಿದ ಸ್ಪೀಕರ್, ಕಂದಾಯ, ಅಲ್ಪಸಂಖ್ಯಾತ ಮತ್ತು ಪಿಡಬ್ಲ್ಯುಡಿ ಇಲಾಖೆಗಳ ಮೂವರು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಜೊತೆಗೆ ಸಮರ್ಪಕ ಉತ್ತರ ಒದಗಿಸದ 3–4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲಾಗಿದೆ.
ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆ ಹಿರಿಯ ಐಎಎಸ್ ಅಧಿಕಾರಿಗಳಿಗೂ ಬಿಸಿ ತಟ್ಟಿದೆ. ಇದೇ ವೇಳೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಧ್ಯಾಹ್ನ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.
ಈ ಘಟನೆ ಬಳಿಕ ಸ್ಪೀಕರ್ ಯು.ಟಿ. ಖಾದರ್ ಮಾತನಾಡಿ, ಸಭೆಯಲ್ಲಿ ಲಿಖಿತ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡುವ ಕುರಿತು ಚರ್ಚೆ ನಡೆಸಲಾಗಿದೆ. ಎಲ್ಲ ಶಾಸಕರಿಗೂ ಸಮರ್ಪಕ ಉತ್ತರ ದೊರಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ಸೇರಿ ಚರ್ಚೆ ನಡೆಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನೊಂದೆಡೆ ವಿಧಾನಸಭೆಯ ಘಟನೆ ಬೆನ್ನಲ್ಲೇ ವಿಧಾನ ಪರಿಷತ್‌ನಲ್ಲೂ ಸಚಿವರ ಗೈರುಹಾಜರಿ ವಿಚಾರ ಚರ್ಚೆಗೆ ಗ್ರಾಸವಾಯಿತು. ಕಡ್ಡಾಯ ಹಾಜರಾತಿ ಇದ್ದರೂ ಸಚಿವರು ಸದನಕ್ಕೆ ಬಾರದಿರುವುದನ್ನು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರವಾಗಿ ಆಕ್ಷೇಪಿಸಿದರು.
ಸದಸ್ಯರ ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ. ಸುಮಾರು 126 ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ ಎಂಬ ಮಾಹಿತಿ ಇದೆ. ನಾವು ಉತ್ತರ ಕೊಡಲಾರದ ಪ್ರಶ್ನೆಗಳನ್ನು ಕೇಳುತ್ತಿದ್ದೇವಾ ಎಂದು ಪ್ರಶ್ನಿಸಿದ ಅವರು, ತಕ್ಷಣ ಉತ್ತರ ಕೊಡಿಸುವಂತೆ ಅಥವಾ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ಸಭಾಪತಿ ಸಭಾನಾಯಕ ಬೋಸರಾಜು ಅವರಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

