ಕಾರವಾರ, ಮಾ. 25: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿ ಸಮೀಪ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯ್ಕ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ದಾಳಿ ನಡೆಸಿದ ಘಟನೆ ಆತಂಕ ಮೂಡಿಸಿದೆ.
ಗೋಪಾಲಕೃಷ್ಣ ನಾಯ್ಕ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಗೋವಾ ನೋಂದಣಿಯ ಫೋರ್ಡ್ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ದಾಳಿ ನಡೆಸಿದ್ದಾರೆ. ಮೊದಲಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಅವರು, ಬಳಿಕ ಚಾಕುವಿನಿಂದ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ನಾಯ್ಕ ಅವರನ್ನು ತಕ್ಷಣ ಅಂಕೋಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗೆ ಅಂಕೋಲ ಠಾಣೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದು, ದಾಳಿಯ ಹಿಂದಿನ ನಿಖರ ಕಾರಣಗಳ ಕುರಿತು ತನಿಖೆ ಮುಂದುವರಿದಿದೆ. ಈ ಘಟನೆ ಸ್ಥಳೀಯರು ಹಾಗೂ ರಾಜಕೀಯ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಭದ್ರತೆ ಬಗ್ಗೆ ಪ್ರಶ್ನೆಗಳು ಎದ್ದಿವೆ.

