ನವದೆಹಲಿ/ವಾಷಿಂಗ್ಟನ್, ಮಾ.25: ಅಮೆರಿಕ ಅಧ್ಯಕ್ಷ Donald Trump ಅವರು ಮಂಗಳವಾರ ಪ್ರಧಾನಿ Narendra Modi ಅವರಿಗೆ ದೂರವಾಣಿ ಕರೆ ಮಾಡಿ ಮಹತ್ವದ ಮಾತುಕತೆ ನಡೆಸಿದರು.
ಈ ವೇಳೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿ ಹಾಗೂ Strait of Hormuz ಜಲಸಂಧಿಯನ್ನು ಮುಕ್ತವಾಗಿರಿಸುವ ಕಾರ್ಯತಂತ್ರಗಳ ಕುರಿತು ಉಭಯ ನಾಯಕರು ಚರ್ಚಿಸಿದರು.
ಈ ವಿಷಯವನ್ನು ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿ, ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿ ಮತ್ತು ಹಾರ್ಮುಜ್ ಜಲಸಂಧಿಯ ಮಹತ್ವದ ಕುರಿತು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.
ಇದಾದ ಬಳಿಕ ಪ್ರಧಾನಿ ಮೋದಿ ಕೂಡ ತಮ್ಮ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಟ್ರಂಪ್ ಅವರಿಂದ ಬಂದ ಕರೆ ಸ್ವೀಕರಿಸಿ ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಪಯುಕ್ತ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದೇವೆ ಎಂದಿದ್ದಾರೆ.
“ಭಾರತವು ಉದ್ವಿಗ್ನತೆ ತಗ್ಗಿಸಲು ಮತ್ತು ಶಾಂತಿ ಪುನಃಸ್ಥಾಪನೆಗೆ ಬದ್ಧವಾಗಿದೆ. ಹಾರ್ಮುಜ್ ಜಲಸಂಧಿ ಮುಕ್ತ, ಸುರಕ್ಷಿತ ಹಾಗೂ ಎಲ್ಲರಿಗೂ ಲಭ್ಯವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು ಜಾಗತಿಕ ಮಟ್ಟದಲ್ಲಿ ಅತ್ಯಂತ ಪ್ರಮುಖವಾಗಿದೆ,” ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ, ಶಾಂತಿ ಮತ್ತು ಸ್ಥಿರತೆ ಕಾಪಾಡಲು ಅಗತ್ಯ ಕ್ರಮಗಳ ಕುರಿತು ಮುಂದುವರಿದ ಸಂಪರ್ಕದಲ್ಲಿರಲು ಉಭಯ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ಮೋದಿ ಹೇಳಿದ್ದಾರೆ.

