ಬೆಂಗಳೂರು, ಏ.7: ಬೇಸಿಗೆಯ ಬಿಸಿಯ ನಡುವೆಯೇ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವು ಕಡೆಗಳಲ್ಲಿ ದಾಳಿ ನಡೆಸಿ ಅಕ್ರಮ ಸಂಪತ್ತಿನ ಸುಳಿವುಗಳನ್ನು ಪತ್ತೆಹಚ್ಚಿದ್ದಾರೆ. ಬಳ್ಳಾರಿ, ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಮನ್ವಯಿತ ಕಾರ್ಯಾಚರಣೆ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರೆಸಲಾಗಿದೆ.
ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆಯ ಅಧಿಕಾರಿ ಟಾರ್ಗೆಟ್
ಬಳ್ಳಾರಿಯಲ್ಲಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸಿದ್ಧಾರ್ಥ್ ನಗರದ ನಿವಾಸ ಸೇರಿದಂತೆ ಒಟ್ಟು ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ಈ ದಾಳಿ ನಡೆದಿದ್ದು, ಸರ್ಕಾರಿ ಬೊಲೆರೋ ವಾಹನದ ದಾಖಲೆಗಳನ್ನೂ ಪರಿಶೀಲಿಸಲಾಗಿದೆ. ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಲಾಗಿದೆ. ಎರಡು ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿವೆ.
ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆಯ ಎಇಇ ಮನೆ ಮೇಲೆ ದಾಳಿ
ಮೈಸೂರಿನಲ್ಲಿ ಲೋಕೋಪಯೋಗಿ ಇಲಾಖೆ ಎಇಇ ರೇವಣ್ಣ ಅವರ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆದಿದೆ. ಮೈಸೂರಿನ ಕಚೇರಿ ಸೇರಿದಂತೆ ಮಂಡ್ಯದ ಎರಡು ನಿವಾಸಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮುಂದುವರಿದಿದೆ.
ಶಿವಮೊಗ್ಗದಲ್ಲಿ ಬಹುಸ್ಥಳಗಳಲ್ಲಿ ಶೋಧ
ಶಿವಮೊಗ್ಗದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್ ಅವರ ಮನೆ ಮೇಲೆ ದಾಳಿ ನಡೆದಿದೆ. ಶಿವಮೊಗ್ಗ, ಶಿಕಾರಿಪುರ ಹಾಗೂ ಸಾಗರದಲ್ಲಿ ಹಲವು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಚೆನ್ನಕೇಶವ ನಗರದಲ್ಲಿನ ಮನೆ, ತರಲಘಟ್ಟ ಬಳಿಯ ತೋಟ ಹಾಗೂ ಫಾರ್ಮ್ ಹೌಸ್, ಸಾಗರ ತಾಲೂಕಿನ ಅಚಾಪುರ ಬಳಿಯ ಶಾಲೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ. ಜೊತೆಗೆ ಬಿಸಿಎಂ ಇಲಾಖೆಯ ರಾಘವೇಂದ್ರ ಅವರ ಮನೆ ಮೇಲೂ ದಾಳಿ ನಡೆಸಲಾಗಿದೆ. ಐದು ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ದಾವಣಗೆರೆ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ ಅಧಿಕಾರಿಗಳು ಸಹಕರಿಸಿದ್ದಾರೆ.
ಚಿತ್ರದುರ್ಗದಲ್ಲಿ ನಿವೃತ್ತ ಅಧಿಕಾರಿಗೆ ಲೋಕಾ ಶಾಕ್
ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೆದೇಹಳ್ಳಿ ಬಡಾವಣೆಯ ಮನೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಸೇವೆಯಲ್ಲಿದ್ದಾಗಲೇ ಭ್ರಷ್ಟಾಚಾರದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಮನೆಯಲ್ಲಿ ಭಾರಿ ಪ್ರಮಾಣದ ಚಿನ್ನಾಭರಣ ಮತ್ತು ಆಸ್ತಿ ದಾಖಲೆಗಳು ಪತ್ತೆಯಾಗಿದ್ದು, ಅವುಗಳ ಮೌಲ್ಯ ಮತ್ತು ಮೂಲದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ.

