ಬೆಂಗಳೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ನಿಯಮ ಬಾಹಿರವಾಗಿ ನಿವೇಶನ ಪಡೆದ ಆರೋಪದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಲು ಉದ್ದೇಶಿಸಿರುವ ಪಾದಯಾತ್ರೆ ನಾಳೆಯಿಂದ ಆರಂಭವಾಗಲಿದೆ.ನಾಳೆ ಬೆಳಗ್ಗೆ 8 ಗಂಟೆಗೆ ಕೆಂಗೇರಿ ಸಮೀಪದ ಮೈಸೂರು ರಸ್ತೆಯ ಕೆಂಪಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತದೆ.
ನಾಳೆ ಬೆಳಗ್ಗೆ ಪ್ರಾರಂಭವಾಗಲಿರುವ ಪಾದಯಾತ್ರೆಯಲ್ಲಿ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪ್ರಮುಖರಾದ ಆರ್.ಅಶೋಕ್, ಸುರೇಶ್ ಬಾಬು, ಛಲವಾದಿ ನಾರಾಯಣಸ್ವಾಮಿ, ಸಾ.ರಾ.ಮಹೇಶ್, ಬಂಡೆಪ್ಪ ಕಾಶ್ಯಂಪುರ್, ಅಶ್ವಥ್ ನಾರಾಯಣ, ಡಿ.ವಿ.ಸದಾನಂದಗೌಡ ಸೇರಿದಂತೆ ಎರಡು ಪಕ್ಷಗಳ ಪ್ರಮುಖರು ಭಾಗಿಯಾಗಲಿದ್ದಾರೆ.
ಒಟ್ಟು ಏಳು ದಿನಗಳ ಕಾಲ ಅಂದರೆ ಆ.8ರವರೆಗೆ ಮೈಸೂರುವರೆಗೆ ಪಾದಯಾತ್ರೆ ಸಾಗಲಿದ್ದು, ಆ.10ರಂದು ಸಮಾರೋಪ ಸಮಾರಂಭ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಅನುಮತಿ ನೀಡಲು ಸರ್ಕಾರ ನಿರ್ಧಾರ:
ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ಕೊಡಲು ಸರ್ಕಾರ ನಿರ್ಧರಿಸಿದೆ. ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಹೀಗಾಗಿ ಪಾದಯಾತ್ರೆಗೆ ಅನುಮತಿ ಕೊಡಲು ನಿರ್ಧರಿಸಿದ್ದೇವೆ ಎಂದರು.
ಕೆಲವೇ ದಿನ ಹಿಂದಷ್ಟೇ ಮಾತನಾಡಿದ್ದ ಪರಮೇಶ್ವರ್, ಪಾದಯಾತ್ರೆಗೆ ನಾವು ಅನುಮತಿ ನೀಡುವುದಿಲ್ಲ. ಅವರು ಮಾಡುವುದಿದ್ದರೆ ಮಾಡಿಕೊಳ್ಳಲಿ, ಅದರ ಬಗ್ಗೆ ನಮ್ಮ ತಕರಾರಿಲ್ಲ. ಆದರೆ, ಅಧಿಕೃತವಾಗಿ ಪೊಲೀಸ್ ಇಲಾಖೆಯಿಂದ ನಾವು ಅನುಮತಿ ನೀಡುವುದಿಲ್ಲ ಎಂದಿದ್ದರು. ಇದೀಗ ಯೂಟರ್ನ್ ಹೊಡೆದಿದ್ದಾರೆ.

