ಚಿತ್ತೂರು (ಆಂಧ್ರ ಪ್ರದೇಶ): ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿ ಕರ್ನಾಟಕದ ಐವರು ಸಾವನ್ನಪ್ಪಿದ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪ ನಡೆದಿದೆ.
ತಿರುಪತಿ ದೇಗುಲಕ್ಕೆ ತೆರಳುತ್ತಿದ್ದ ವೇಳೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಮೋಹನ್‌ದಾಸ್ (71), ನಾಗರಾಜ್ (61), ಕುಸುಮಾ (61), ಜಯಂತಿ (59) ಹಾಗೂ ಪೂಜಾ (33) ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ರಾಜಾಜಿನಗರ ನಿವಾಸಿಗಳು ಎಂದು ತಿಳಿದು ಬಂದಿದೆ.
ಅತಿವೇಗದಲ್ಲಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿ ಸಿಲುಕಿದ್ದ ಶವಗಳನ್ನು ಹೊರತೆಗೆಯಲು ಹರಸಾಹಸಪಟ್ಟರು.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಅತಿವೇಗ ಹಾಗೂ ಚಾಲಕ ನಿದ್ರೆಗೆ ಜಾರಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ಘಟನೆಯಿಂದ ಬೆಂಗಳೂರಿನ ರಾಜಾಜಿನಗರ ಪ್ರದೇಶದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

