ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ.
ಮಕ್ಕಳ ತಟ್ಟೆಯಲ್ಲಿ ಮೊಟ್ಟೆ ಇಟ್ಟು ಫೋಟೋ ಕ್ಲಿಕ್ಕಿಸಿ ಬಳಿಕ ತಟ್ಟೆಯಿಂದ ಮೊಟ್ಟೆಯನ್ನು ತೆಗೆದುಕೊಳ್ಳುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ವಿಡಿಯೋ ವೈರಲ್ ಆಗಿದ್ದು ಇಬ್ಬರನ್ನೂ ಅಮಾನತು ಮಾಡಲಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದ್ದು ಕಾರ್ಯಕರ್ತೆ ಹಾಗೂ ಸಹಾಯಕಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.
ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಇಬ್ಬರನ್ನೂ ಅಮಾನತುಗೊಳಿಸಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದಿದೆ. ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಲೆತಗ್ಗಿಸುವಂತ ಕೆಲಸ ಮಾಡಿದ್ದಾರೆ. ಮಕ್ಕಳಿಗೆ ಮೊಟ್ಟೆ ಕೊಟ್ಟು ಫೋಟೋ ಕ್ಲಿಕ್ಕಿಸಿ, ಮಕ್ಕಳು ಬಾಯಿಗಿಡುವ ಮುನ್ನವೇ ಮೊಟ್ಟೆ ಕಸಿದುಕೊಂಡಿದ್ದಾರೆ. ಈ ಅಮಾನವೀಯ ಘಟನೆ ವೀಡಿಯೋದಲ್ಲಿ ಸೆರೆಯಾಗಿದೆ.
ಇನ್ನು ಕೊಪ್ಪಳ ಜಿಲ್ಲೆಯ ಅಂಗನವಾಡಿಗಳಲ್ಲಿ ಅವ್ಯವಸ್ಥೆ ಮತ್ತು ಅಕ್ರಮ ಹೆಚ್ಚಾಗಿದ್ದು ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಸಿ.ಚಂದ್ರಶೇಖರ ನೇತೃತ್ವದಲ್ಲಿ ನ್ಯಾಯಾಧೀಶರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

