ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಮುಂದೆ ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಮತ್ತೊಬ್ಬ ಉನ್ನತ ಪೊಲೀಸ್ ಅಧಿಕಾರಿಯ ವಿರುದ್ಧ ಕ್ರಮ ಕೈಗೊಂಡಿದೆ. ಈಗಾಗಲೇ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ್ದ ಸರ್ಕಾರ, ಇದೀಗ ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ (ಐಜಿ) ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಇದರೊಂದಿಗೆ ಬಳ್ಳಾರಿ ವಲಯದ ನೂತನ ಪೊಲೀಸ್ ಐಜಿ ಆಗಿ ಹರ್ಷ ಗುಪ್ತಾ ಅವರನ್ನು ಹಾಗೂ ಬಳ್ಳಾರಿ ಜಿಲ್ಲೆಯ ನೂತನ ಎಸ್ಪಿಯಾಗಿ ಡಾ. ಸುಮನ ಡಿ. ಪೆನ್ನೇಕರ್ ಅವರನ್ನು ನೇಮಕ ಮಾಡಲಾಗಿದೆ.
ಜನವರಿ 1ರಂದು ಮಾತ್ರ ಬಳ್ಳಾರಿ ಎಸ್ಪಿಯಾಗಿ ಪವನ್ ನೆಜ್ಜೂರು ಅವರು ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಆದರೆ ಬ್ಯಾನರ್ ಗಲಾಟೆ ಪ್ರಕರಣವನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿತ್ತು.
ಇದೇ ಪ್ರಕರಣಕ್ಕೆ ಸಂಬಂಧಿಸಿ, ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ವರ್ತಿಕಾ ಕಟಿಯಾರ್ ಅವರ ಮೇಲೂ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಡಿಜಿ–ಐಜಿಪಿ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಆ ವರದಿಯ ಆಧಾರದ ಮೇಲೆ ಇದೀಗ ರಾಜ್ಯ ಸರ್ಕಾರ ಐಜಿ ವರ್ತಿಕಾ ಕಟಿಯಾರ್ ಅವರನ್ನು ವರ್ಗಾವಣೆಗೊಳಿಸಿದೆ.
ಬಳ್ಳಾರಿ ಬ್ಯಾನರ್ ಗಲಾಟೆ ಪ್ರಕರಣವು ಪೊಲೀಸ್ ಇಲಾಖೆಯೊಳಗಿನ ಆಡಳಿತಾತ್ಮಕ ಹೊಣೆಗಾರಿಕೆಗೆ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ಯಾವ ದಿಕ್ಕು ತಾಳಲಿದೆ ಎಂಬುದು ಕುತೂಹಲ ಮೂಡಿಸಿದೆ.

