ದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು (ಮಂಗಳವಾರ) ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಅರವಿಂದ್ ಕೇಜ್ರಿವಾಲ್ ಅವರ ಉತ್ತರಾಧಿಕಾರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಂದಿನ ಸಿಎಂ ಆಗಿ ಸಚಿವೆ ಅತಿಶಿ ಅವರನ್ನು ಆಯ್ಕೆ ಮಾಡಲಾಗಿದ್ದು, ದೆಹಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಭಾನುವಾರದಂಡು ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ‘ಎರಡು ದಿನಗಳಲ್ಲಿ’ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದರು. ಸಾರ್ವಜನಿಕರು ತಮ್ಮ ಪ್ರಾಮಾಣಿಕತೆಯನ್ನು ದೃಢಪಡಿಸುವವರೆಗೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದ ಅವರು ಜೈಲಿನಿಂದ ಹೊರಬಂದ ನಂತರ “ಅಗ್ನಿ ಪರೀಕ್ಷೆ”ಗೆ ಒಳಗಾಗುವ ಇಂಗಿತವನ್ನು ವ್ಯಕ್ತಪಡಿಸಿದರು.
ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದು ದೆಹಲಿಯ ತಿಹಾರ್ ಜೈಲಿನಿಂದ ಹೊರನಡೆದ ಎರಡು ದಿನಗಳ ನಂತರ ಅವರು ಈ ಘೋಷಣೆ ಮಾಡಿದ್ದಾರೆ.