ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆರು ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇರೆಗೆ ಹೊರಬಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಎರಡು ದಿನದೊಳಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮೊದಲ ಬಾರಿಗೆ ಪಕ್ಷದ ಕಚೇರಿಗೆ ತೆರಳಿ, ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಎರಡು ದಿನಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಮತ್ತೆ ಜನಾಶೀರ್ವಾದ ಸಿಗುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ ಎಂದರು.
ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 13ರಂದು ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ಬಂದ ಬಳಿಕ ಪಕ್ಷದ ಕಚೇರಿಗೆ ಭೇಟಿ ನೀಡಿದ ಕೇಜ್ರಿವಾಲ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ರಾಜೀನಾಮೆಯನ್ನು ಘೋಷಿಸಿದ್ದಾರೆ.
ಇನ್ಮುಂದೆ ನಾನು ಸಿಎಂ ಕುರ್ಚಿಯಲ್ಲಿ ಕೂರುವುದಿಲ್ಲ. ನಾನು ಪ್ರಾಮಾಣಿಕನೆಂದು ಜನರು ಹೇಳುವವರೆಗೂ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವುದಿಲ್ಲ. ಇನ್ನೆರಡು ದಿನಗಳಲ್ಲಿ ರಾಜೀನಾಮೆ ನೀಡುತ್ತೇನೆ. ಜನಾದೇಶದೊಂದಿಗೆ ವಾಪಸ್ ಬರುತ್ತೇನೆ ಎಂದು ಹೇಳಿದ್ದಾರೆ.

