ಬೆಳಗಾವಿ, ಫೆ.16: ಮಹಾಶಿವರಾತ್ರಿ ದಿನದಂದೇ ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಸ್ಥಳೀಯರು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.
ನಗರದ ಚನ್ನಮ್ಮ ವೃತ್ತದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ಲಾರಿಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ವಾಹನವನ್ನು ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಲಾರಿಯಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದೆ.
ಶಿವರಾತ್ರಿ ಹಿನ್ನಲೆಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸುವಂತೆ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದರೂ, ಅದನ್ನು ಉಲ್ಲಂಘಿಸಿ ಸಾಗಾಟ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಪಾಸಣೆ ವೇಳೆ ಲಾರಿ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ವಾಹನವನ್ನು ಸೀಜ್ ಮಾಡಿ ಎಪಿಎಂಸಿ ಪೊಲೀಸ್ ಠಾಣೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಡಿಸಿಪಿ ನಾರಾಯಣ ಬರಮನಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಘಟನೆಯ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.

