ಬೆಂಗಳೂರು, ಮಾ.21: ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಲಾರಿ ಹರಿದು 4 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ ಉತ್ತರ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ನಡೆದಿದೆ.
ನಿಶಿಕಾ (4) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಯುಗಾದಿ ಹಬ್ಬದ ಬಳಿಕ ತಾಯಿ-ಮಗಳು ದೇವರ ದರ್ಶನಕ್ಕಾಗಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ತಾಯಿ ಕಂಕುಳಲ್ಲಿ ಎರಡನೇ ಮಗುವನ್ನು ಹಿಡಿದುಕೊಂಡು, ನಿಶಿಕಾ ಕೈ ಹಿಡಿದು ನಡೆದುಕೊಂಡು ಹೋಗುತ್ತಿದ್ದಾಗ ಎದುರಿನಿಂದ ಬಂದ ಲಾರಿ ಏಕಾಏಕಿ ನಿಯಂತ್ರಣ ತಪ್ಪಿ ಮಗುವಿನ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ತಾಯಿಯ ಕಣ್ಣೆದುರೇ ಬಾಲಕಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾಳೆ. ಈ ಘಟನೆ ತಾಯಿಗೆ ತೀವ್ರ ಆಘಾತ ಉಂಟುಮಾಡಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದಲ್ಲದೆ, ಮೃತ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನಿಸಲಾಗಿದೆ.

