ಬೆಂಗಳೂರು : ಬೆಂಗಳೂರು ಮೆಟ್ರೋ ಸಾರ್ವಕಾಲಿಕ ದಾಖಲೆ ಬರೆದಿದೆ. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಹಾಗೂ ಸಾಲು ಸಾಲು ರಜಾದಿನಗಳು ಇರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋದಲ್ಲಿ ಸಂಚರಿಸುವವರ ಒಂದೇ ದಿನದಲ್ಲಿ ಅತ್ಯಧಿಕ ಗರಿಷ್ಠ ಪ್ರಮಾಣ ತಲುಪಿದೆ. ಇದು ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಆಗಸ್ಟ್ 14, 2024 ಅಂದರೆ ನಿನ್ನೆ(ಬುಧವಾರ) ನಮ್ಮ ಮೆಟ್ರೋ ಪ್ರಯಾಣಿಕರ ಸಂಚಾರದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬುಧವಾರ ಒಂದೇ ದಿನ ನಮ್ಮ ಮೆಟ್ರೋದಲ್ಲಿ 9.17 ಲಕ್ಷ ಪ್ರಯಾಣಿಕರು ಸಂಚರಿಸಿದ್ದಾರೆ. ಬೆಂಗಳೂರು ಮೆಟ್ರೋ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟು ಸಂಖ್ಯೆಯ ಜನರು ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 13 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪ್ರಯಾಣಿಕರ ಸಂಖ್ಯೆ 9 ಲಕ್ಷ ದಾಟಿದೆ. ಜೊತೆಗೆ ಒಂದೇ ದಿನ ಅತೀ ಹೆಚ್ಚು ಪ್ರಯಾಣಿಕರು ಸಂಚರಿಸಿರುವುದು ನಮ್ಮ ಮೆಟ್ರೋಗೆ ಖುಷಿಯ ವಿಚಾರವಾಗಿದೆ.
ಈ ಬಗ್ಗೆ ನಮ್ಮ ಮೆಟ್ರೋ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಈ ಸಂತಸದ ವಿಷಯವನ್ನು ಹಂಚಿಕೊಂಡಿದೆ. ಬೆಂಗಳೂರು ಮೆಟ್ರೋ ತನ್ನ ಪ್ರಯಾಣಿಕರಿಗೆ ಧನ್ಯವಾದಗಳನ್ನು ತಿಳಿಸಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಇನ್ನು ಉತ್ತಮ ಸೇವೆ ನೀಡುವುದಾಗಿ ಭರವಸೆ ನೀಡಿದೆ.

