ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಲಿನ ಜೊತೆಗೆ ಮಳೆಯೂ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳ ಕೆಲವೆಡೆ ಇಂದಿನಿಂದ ಏಪ್ರಿಲ್ 14ರವರೆಗೆ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು ಹಾಗೂ ಚಾಮರಾಜನಗರ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಶನಿವಾರ ಮತ್ತು ಭಾನುವಾರ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಇನ್ನೊಂದೆಡೆ, ಉತ್ತರ ಒಳನಾಡಿನ ಬೆಳಗಾವಿ, ಕಲಬುರಗಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದ್ದು, ತಾಪಮಾನದಲ್ಲಿ ಏರಿಕೆ ಕಾಣಲಿದೆ.
ಕರಾವಳಿ ಕರ್ನಾಟಕದಲ್ಲಿ ಸೆಖೆ ಹೆಚ್ಚಾಗುವ ಹಿನ್ನೆಲೆ ಏಪ್ರಿಲ್ 13ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.
ಏಪ್ರಿಲ್ 15ರಂದು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ಹಗಲಿನಲ್ಲಿ ಬಿಸಿಲಿನ ವಾತಾವರಣ ಮುಂದುವರಿಯಲಿದ್ದು, ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗಾಳಿಯ ವೇಗ ಗಂಟೆಗೆ 6ರಿಂದ 13 ಕಿಲೋಮೀಟರ್ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

