ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಬಿಜೆಪಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಾಗಲಕೋಟೆ ಉಪಚುನಾವಣಾ ಪ್ರಚಾರ ಕಾರ್ಯ ಚುರುಕಾಗಿ ಸಾಗುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ವ್ಯಕ್ತವಾಗುತ್ತಿದೆ. ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರೆಯುತ್ತಿದ್ದು, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಯೋಜನೆಗಳು ಬಡವರ ಹಿತದೃಷ್ಟಿಯಿಂದ ರೂಪಿಸಲ್ಪಟ್ಟಿದ್ದು, ಎಲ್ಲಾ ಜಾತಿ, ಧರ್ಮ ಮತ್ತು ಭಾಷೆಗಳ ಜನರನ್ನು ಒಳಗೊಂಡಿವೆ. ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಅವು ಸಾಮಾಜಿಕ ಬದ್ಧತೆಯನ್ನು ಒದಗಿಸುವ ಹೂಡಿಕೆಗಳಾಗಿವೆ. ಇದೂ ಅಭಿವೃದ್ಧಿಯ ಒಂದು ಭಾಗವೇ ಎಂದು ಸಿಎಂ ಹೇಳಿದರು.
ಅಭಿವೃದ್ಧಿಯೆಂದರೆ ಕೇವಲ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ನಿರ್ಮಾಣವಲ್ಲ; ಜನರಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವುದೂ ಸಮಾನವಾಗಿ ಮುಖ್ಯ ಎಂದು ಅವರು ಹೇಳಿದರು. ಸಾಮಾಜಿಕ ಯೋಜನೆಗಳನ್ನು ಘೋಷಿಸಿದ ಬಳಿಕದಿಂದ ಬಿಜೆಪಿ ನಿರಂತರವಾಗಿ ವಿರೋಧಿಸುತ್ತಲೇ ಬಂದಿದೆ ಎಂದು ಟೀಕಿಸಿದರು.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೆಲವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಆರೋಪಿಸಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಲ್ಲಿದ್ದು, 2026 ಮಾರ್ಚ್ 24ರವರೆಗೆ 1.31 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಪೊಲೀಸ್ ಇಲಾಖೆ ಹಾಗೂ ಎಸ್‌ಸಿ/ಎಸ್‌ಟಿ ಯೋಜನೆಗಳಿಗೆ ನೀಡುವ ಅನುದಾನದಲ್ಲಿ ಯಾವುದೇ ಕಡಿತ ಮಾಡಿಲ್ಲ. ಕಳೆದ ವರ್ಷ 42,000 ಕೋಟಿ ರೂ. ವೆಚ್ಚ ಮಾಡಲಾಗಿದ್ದರೆ, ಈ ವರ್ಷ 44,000 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಯಾವುದೇ ರೀತಿಯಲ್ಲಿ ಕುಂಠಿತವಾಗಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

