ಬೆಳಗಾವಿ, ಜನವರಿ 8, 2026: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಸಂಭವಿಸಿದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ವಿಕ್ರಂ ಇನಾಮದಾರ್ ಹಾಗೂ ಪ್ರಭಾಕರ್ ಕೋರೆ ಸಹಭಾಗಿತ್ವದ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ನಿನ್ನೆ ಬಾಯ್ಲರ್ ಏಕಾಏಕಿ ಸ್ಪೋಟಗೊಂಡಿದ್ದು, ಸ್ಥಳದಲ್ಲೇ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಲವರನ್ನು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಇಂದು ಚಿಕಿತ್ಸೆ ಫಲಿಸದೆ ಇನ್ನೂ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಕ್ಷಯ್, ಭರತೇಶ್, ಸುದರ್ಶನ್, ಮಂಜುನಾಥ್, ಗುರು, ದೀಪಕ್ ಮತ್ತು ಮಂಜು ಸೇರಿ ಒಟ್ಟು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಮತ್ತೊಬ್ಬ ಗಾಯಾಳು ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇತ್ತ, ಇಂತಹ ಭೀಕರ ದುರಂತ ಸಂಭವಿಸಿದರೂ ಕಾರ್ಖಾನೆಯ ಆಡಳಿತ ಮಂಡಳಿ ಇದುವರೆಗೂ ಯಾವುದೇ ಅಧಿಕೃತ ಸ್ಪಂದನೆ ನೀಡಿಲ್ಲ ಎಂಬ ಆರೋಪಗಳು ಕೇಳಿಬಂದಿವೆ. ಕಾರ್ಮಿಕರ ಸುರಕ್ಷತೆ ಕುರಿತು ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆಕ್ರೋಶವೂ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಬಗ್ಗೆ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ತನಿಖೆ ನಡೆಸುತ್ತಿದ್ದು, ಮುಂದಿನ ಕ್ರಮಗಳ ಬಗ್ಗೆ ನಿರೀಕ್ಷೆ ಮೂಡಿದೆ.

