ದಾವಣಗೆರೆ: ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಏಪ್ರಿಲ್ 9 ರಂದು ಉಪಚುನಾವಣೆ ನಡೆಯಲಿದೆ.
ಈ ಕುರಿತು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,683 ಮತದಾರರು ಇದ್ದಾರೆ ಎಂದು ಅವರು ಹೇಳಿದರು.
ಇದರಲ್ಲು 1,13,654 ಮಂದಿ ಪುರುಷರು, 1,17,986 ಮಂದಿ ಮಹಿಳೆಯರು ಹಾಗೂ 43 ಮಂದಿ ತೃತೀಯ ಲಿಂಗದ ಮತದಾರರು ಸೇರಿದ್ದಾರೆ. ಕ್ಷೇತ್ರದಲ್ಲಿ ಒಟ್ಟು 284 ಮತಗಟ್ಟೆಗಳು ಸ್ಥಾಪಿಸಲಾಗಿದ್ದು, ಚುನಾವಣಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಉಪಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಕೇವಲ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಮಾತ್ರ ಜಾರಿಯಾಗಲಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಚುನಾವಣಾ ವೆಚ್ಚ ಮಿತಿಯನ್ನು 40 ಲಕ್ಷ ರೂಪಾಯಿಗೆ ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

