ನವದೆಹಲಿ: ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಗುರುವಾರ ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಲ್ಪಸಂಖ್ಯಾತರ ನಾಯಕ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಇಂದು ಆದೇಶ ಹೊರಡಿಸಿದೆ. ಇದರೊಂದಿಗೆ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮತ್ತೊಮ್ಮೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಧಾರವಾಡ ಶಾಸಕ ವಿನಯ್ ಕುಲಕರ್ಣಿ ಪುತ್ರಿಗೆ ಟಿಕೆಟ್ ನೀಡಲಾಗುತ್ತೆ ಎಂದು ಹೇಳಲಾಗಿತ್ತು. ಆದರೆ ಹೈಕಮಾಂಡ್ , ಅಂತಿಮವಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟಿದೆ.
ಹಾನಗಲ್ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್ ಅಹ್ಮದ್ ಖಾನ್ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್, ಹೈಕಮಾಂಡ್ ಯಾಸೀರ್ ಅಹ್ಮದ್ ಖಾನ್ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.
ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಭಾರಿ ಪೈಪೋಟಿ ನಡೆದಿತ್ತು. ಕಳೆದ ಐದು ಚುನಾವಣೆಗಳಲ್ಲೂ ಸಹ ಮುಸ್ಲಿಂ ಸಮುದಾಯಕ್ಕೆ ಟಿಕೆಟ್ ನೀಡಲಾಗಿದ್ದು, ಈ ಬಾರಿ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿಬಂದಿದ್ದವು.