ಬೆಂಗಳೂರು : ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ಬೆಂಗಳೂರಿನ 35ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ.
ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಆದರೆ ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರು ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ಕೋರ್ಟ್, ಆಗಸ್ಟ್ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಂತರ ರೂ. ನಗದು, ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕ್ಯಾಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ವ್ಯವಹಾರ ನಡೆದಿದೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್ 28ರ ವರೆಗೆ ಶಾಸಕನನ್ನು ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.
ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಶುಕ್ರವಾರ ಬಂಧಿಸಿದ್ದರು. ಅವರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿ, 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದರು.

