ನವದೆಹಲಿ: ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಗುರುವಾರ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಒಟ್ಟು 89 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಆರು ಪಟ್ಟಿಗಳ ಮೂಲಕ 89 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇಲ್ಲಿನ ಭಿವಾನಿ ವಿಧಾನಸಭಾ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ. ಈ ಮೂಲಕ ಆಮ್ ಆದ್ಮಿ ಜೊತೆ ಮೈತ್ರಿ ಮಾಡಿಕೊಂಡಿಲ್ಲ.
ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸುವುದರೊಂದಿಗೆ, ಕಾಂಗ್ರೆಸ್ ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದೆ. ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ (ಎಎಪಿ) ನಡುವೆ ಸೀಟು ಹಂಚಿಕೆ ಮಾತುಕತೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಮೈತ್ರಿ ಮಾತುಕತೆಗೆ ಅಂತ್ಯ ಹಾಡಿ ಕಾಂಗ್ರೆಸ್ 89 ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಹೆಸರನ್ನು ಘೋಷಿಸಿದೆ.
ಭಾರತದ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಅಕ್ಟೋಬರ್ 1ರಿಂದ ಅಕ್ಟೋಬರ್ 5ಕ್ಕೆ ಪರಿಷ್ಕರಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗಳ ಮತ ಎಣಿಕೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.