ಅಥಣಿ: ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಅವರ ತವರು ಕ್ಷೇತ್ರದಲ್ಲಿ ಬ್ಯಾಂಕ್ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಕೃಷಿ ಪತ್ತಿನ ಸಹಕಾರಿ ಸಂಘ (ಪಿಕೆಪಿಎಸ್) ಹಲವು ಆರೋಪಗಳ ಸುಳಿಯಲ್ಲಿ ಸಿಲುಕಿದ್ದು, ಗ್ರಾಮಸ್ಥರು ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.
ಕಂಪ್ಯೂಟರ್ ಆಪರೇಟರ್ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಯಾವುದೇ ಕಾನೂನು ನಿಯಮಗಳನ್ನು ಪಾಲಿಸದೆ ನೇಮಕಾತಿ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಲಂಚ ಪಡೆದು ಸಂಘದ ಕಾರ್ಯದರ್ಶಿಯ ಮಗನನ್ನೇ ಹುದ್ದೆಗೆ ನೇಮಕ ಮಾಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಚೇರಿಯ ಎದುರು ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ.
ಗ್ರಾಮದಲ್ಲಿ ವಿದ್ಯಾವಂತ ಯುವಕರು ಇದ್ದರೂ ಅವರನ್ನು ಪರಿಗಣಿಸದೆ ಅಕ್ರಮವಾಗಿ ನೇಮಕಾತಿ ಮಾಡಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

