ಬೆಂಗಳೂರು : ಅಬಕಾರಿ ಇಲಾಖೆಯಲ್ಲಿ ಭಾರೀ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಹೇಳಿಕೆ ನೀಡಿದ್ದಾರೆ. “ಉಪ್ಪು ತಿಂದವರು ನೀರು ಕುಡಿಯಲೇ ಬೇಕು” ಎಂದು ಹೇಳಿದ ಅವರು, ಆರೋಪಗಳು ಸಾಬೀತಾದರೆ ಸಂಬಂಧಿಸಿದವರು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
ಲೋಕಯುಕ್ತಕ್ಕೆ ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಸಿಕ್ಕಿಹಾಕಿಕೊಂಡಿರುವುದು ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದರು. ಸಚಿವರ ಮೇಲೆಯೇ ಆರೋಪಗಳು ಸಾಬೀತಾದರೆ ರಾಜೀನಾಮೆ ನೀಡುವುದು ಫಿಕ್ಸ್ ಎಂದು ಖಡಕ್ ಎಚ್ಚರಿಕೆ ನೀಡಿದರು.
ಬಳ್ಳಾರಿ ಘಟನೆ – ಸಿಬಿಐ ತನಿಖೆ ವಿಚಾರ
ಬಳ್ಳಾರಿ ಅಬಕಾರಿ ಇಲಾಖೆಗೆ ಸಂಬಂಧಿಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ವಿಚಾರಕ್ಕೆ ಸಂಬಂಧಿಸಿ, ಸಿಬಿಐ ಅಧಿಕಾರಿಣಿ ಶಾಲಿನಿ ರಜನೀಶ್ ಅವರಿಗೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
“ಯಾವುದೇ ಕೇಸ್ ಆಗಿರಲಿ, ನೀವೇ ನೋಡಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ರಾಜ್ಯ ಸರ್ಕಾರದ ವತಿಯಿಂದ ನಡೆಸಿದ ತನಿಖೆ ಸರಿಯಾದ ದಾರಿಯಲ್ಲೇ ಇದೆ” ಎಂದು ಅವರು ಸ್ಪಷ್ಟಪಡಿಸಿದರು.
ಅಬಕಾರಿ ಇಲಾಖೆಯಲ್ಲಿ ಪಾರದರ್ಶಕತೆ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ರಾಜಿ ಇಲ್ಲ ಎಂದು ಸಚಿವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದರು.

